ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಆರೋಪ; ಇಬ್ಬರ ಬಂಧನ

Update: 2023-09-22 15:02 GMT

ಮಂಗಳೂರು, ಸೆ.22:‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರ ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ‘ಎಂಡಿಎಂಎ’ಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರನ್ನು ಉಪ್ಪಿನಂಗಡಿ ಸಮೀಪದ ತೆಕ್ಕಾರು ಗ್ರಾಮದ ಪಿ.ಎಸ್.ಅಬ್ದುಲ್ ಅಝೀಝ್ ಯಾನೆ ಅಝೀಝ್ (31) ಮತ್ತು ಸುರತ್ಕಲ್ ಸಮೀಪದ ಕಾಟಿಪಳ್ಳದ ಅಕ್ಷಿತ್ ಕುಮಾರ್ (26)ಎಂದು ಗುರುತಿಸಲಾಗಿದೆ.

ನಗರದ ಕೆಎಸ್ ರಾವ್ ರಸ್ತೆ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾದಕ ವಸ್ತು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 35 ಗ್ರಾಂ ತೂಕದ 1.75 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್‌ಗಳು, 600 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 1.96 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ,

ಆರೋಪಿಗಳ ವಿರುದ್ಧ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಅಬ್ದುಲ್ ಅಝೀಝ್‌ನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ, ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿದೆ. 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸಿ ಸಿಕ್ಕಿಬಿದ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News