ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Update: 2023-09-22 17:09 GMT

ಮಂಗಳೂರು, ಸೆ.22: ‘ಡ್ರಗ್ಸ್ ಮುಕ್ತ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ‘ಎಂಡಿಎಂಎ’ಯನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಉಳ್ಳಾಲ ಬೈಲ್ ಪರಿಸರದಲ್ಲಿ ಇಬ್ಬರು ಮಾದಕ ವಸ್ತು ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಉಳ್ಳಾಲ ಸುಭಾಷ್‌ನಗರದ ಜಾಕೀರ್ (29) ಮತ್ತು ಅರ್ಕುಳ ಗ್ರಾಮದ ವಳಚಿಳ್ ಪದವಿನ ಕಾರ್ತಿಕ್ ಸುವರ್ಣ (27) ಎಂಬವರನ್ನು ಬಂಧಿಸಿದರು.

ಆರೋಪಿಗಳಿಂದ 20 ಗ್ರಾಂ ತೂಕದ 1 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಹೊಂಡಾ ಅಕ್ಟಿವಾ ಸ್ಕೂಟರ್, 2 ಮೊಬೈಲ್ ಫೋನ್‌ಗಳು, ನಗದು 3,300ರೂ., ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಒಟ್ಟು ಮೌಲ್ಯ 2.15 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.

ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣವು ಉಳ್ಳಾಲ ಠಾಣೆಯಲ್ಲಿ ದಾಖಲಾಗಿದೆ. ಇನ್ನೋರ್ವ ಆರೋಪಿ ಕಾರ್ತಿಕ್ ವಿರುದ್ಧ ದ್ವಿಚಕ್ರ ವಾಹನ ಕಳ್ಳತನ ಮಾಡಿದ ಪ್ರಕರಣವು ಬಂದರ್ ಠಾಣೆಯಲ್ಲಿ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News