ಮಂಗಳೂರು: ಅತ್ಯಾಚಾರ ಆರೋಪಿ ಸಹಿತ ಮೂವರಿಗೆ ಕಠಿಣ ಶಿಕ್ಷೆ, ದಂಡ

Update: 2024-08-30 15:09 GMT

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಅತ್ಯಾಚಾರಗೈದ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.

ಪುತ್ತೂರು ಕಬಕದ ನಿವಾಸಿ ನಿತೇಶ್ (30) ಶಿಕ್ಷೆಗೊಳಗಾದ ಆರೋಪಿ. ಅದಲ್ಲದೆ ಈತನ ತಂದೆ ರಾಮಣ್ಣ ಪೂಜಾರಿ (63) ಮತ್ತು ಭಾವ ನಿಖಿತಾಶ್ ಸುವರ್ಣ(40) ಎಂಬವರಿಗೂ 5 ವರ್ಷಗಳ ಶಿಕ್ಷೆ ವಿಧಿಸಲಾಗಿದೆ.

ನಿತೇಶ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ. ಬಳಿಕ ಮದುವೆಯಾಗಲು ನಿರಾಕರಿಸಿದ್ದ ಎಂದು ಆರೋಪಿಸಲಾಗಿತ್ತು. ಅಲ್ಲದೆ ಮದುವೆಯಾಗಲು ಒತ್ತಾಯಿಸಿದ್ದಕ್ಕೆ ನಿತೇಶ್‌ನ ತಂದೆ ಮತ್ತು ಭಾವ ಕೊಲೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಈ ಬಗ್ಗೆ ಯುವತಿಯು 2019ರಲ್ಲಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಳು. ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯಕ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದ್ದಾರೆ. ಕಲಂ 417ರಡಿ 1 ವರ್ಷ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ರಾಮಣ್ಣ ಪೂಜಾರಿ ಮತ್ತು ನಿಖಿತಾಶ್‌ಗೆ ಭಾರತೀಯ ದಂಡ ಸಂಹಿತೆಯ ಕಲಂ 504ರಡಿ 1 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ಹಾಗೂ ಕಲಂ 506ರಡಿ 5 ವರ್ಷ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಅಲ್ಲದೆ ನೊಂದ ಯುವತಿಗೆ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಶಿಪಾರಸು ಮಾಡಿದ್ದಾರೆ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕರಾದ ಬಿ.ಶೇಖರ ಶೆಟ್ಟಿ ಮತ್ತು ಚೌಧರಿ ಮೋತಿಲಾಲ್ ಸಾಕ್ಷಿಗಳ ವಿಚಾರಣೆ ನಡೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News