ಮಾ.31, ಎ.14 ಆಳ್ವಾಸ್ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ; 10 ಕೋಟಿ ರೂ.ಗಳಿಗೂ ಅಧಿಕ ವಿದ್ಯಾರ್ಥಿವೇತನ

Update: 2024-03-15 10:30 GMT

ಮಂಗಳೂರು, ಮಾ.15: ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪೋತ್ಸಾಹಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ (ಪದವಿ ಪೂರ್ವ) ವಿದ್ಯಾರ್ಥಿಗಳಿ ಎರಡು ವರ್ಷಕ್ಕೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ವಿವರ ನೀಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ, 10ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಬರೆಯಬಹುದು ಎಂದರು.

ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು 100 ನಿಮಿಷಗಳ ಪರೀಕ್ಷೆಯು ಮಾ. 31ರಂದು ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಹಾಗೂ ಎ. 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ವಿದ್ಯಾಗಿರಿ ಶ್ರೀಮತಿ ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ.

ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾ. 28 ಕೊನೆಯ ದಿನಾಂಕವಾಗಿದ್ದು, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಎ. 10ರ ವರೆಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ವೆಬ್ ಸೈಟ್ https://scholarship.Alvas.org/PUC/login.php ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ಅವರು ಹೇಳಿದರು.

ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜೊತೆಯಲ್ಲಿ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ, ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೂ ಆಯ್ಕೆಗಳು ನಡೆಯುತ್ತವೆ.

ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ತಾನು ಸಮಾಲೋಚನೆ ನಡೆಸುವುದಾಗಿ ಅವರು ಈ ಸಂದರ್ಭ ತಿಳಿಸಿದರು.

ಶೈಕ್ಷಣಿಕ- ಬೋಧನಾ ಭಿನ್ನತೆ, ಸಾಮಾಜಿಕ ಅಸಮಾನತೆ, ಆರ್ಥಿಕ ಅಜಗಜಾಂತರ, ಪ್ರಾದೇಶಿಕ ಭೇದಭಾವ, ಲಿಂಗ ತಾರತಮ್ಯ ಎಲ್ಲವನ್ನೂ ಮೀರಿ ಅರ್ಹ ಮಕ್ಕಳಿಗೆ ಅರ್ಹತೆಯ ಆಧಾರದಲ್ಲಿ ಅತ್ಯುನ್ನತ ಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಆಶಯದೊಂದಿಗೆ ಈ ಪ್ರವೇಶ ಪರೀಕ್ಷೆ ನಡೆಸಾಲಾಗುತ್ತಿದೆ. ಪ್ರತಿ ವರ್ಷ ಸುಮಾರು 3000ದಷ್ಟು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ:8884477588, 6366377827 ಅಥವಾ 6366377823 ಸಂಪರ್ಕಿಸಬಹುದು.

ಸುದ್ದಿಗೋಷ್ಟಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News