ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ರನ್ನು ಭೇಟಿಯಾದ ಸಂಸದ ಕ್ಯಾ. ಚೌಟ -ಶಾಸಕ ಪೂಂಜ

ಮಂಗಳೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ ಸಂಸದರು, ಬೆಳ್ತಂಗಡಿ ತಾಲೂಕಿನ ಶ್ರೀ ನಂದಿಕೇಶ್ವರ ದೇವಸ್ಥಾನ (ನಂದಿಬೆಟ್ಟ ಗರ್ಡಾಡಿ), ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (ಕೊಲ್ಲಿ), ಶ್ರೀ ಶಿಶಿಲೇಶ್ವರ ದೇವಸ್ಥಾನ(ಶಿಶಿಲ), ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ (ಉಪ್ಪಿನಂಗಡಿ) ಮತ್ತು ಸುಳ್ಯ ತಾಲೂಕಿನ ಶ್ರೀ ತೋಡಿಕಾನ ಮಲ್ಲಿಕಾರ್ಜುನ ದೇವಸ್ಥಾನಗಳನ್ನು ‘ಪ್ರಸಾದ್’ ಯೋಜನೆಯಡಿ ಅಭಿವೃದ್ಧಿಪಡಿಸಬೇಕು. ಆ ಮೂಲಕ ಈ ದೇವಸ್ಥಾನಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು-ಪ್ರವಾಸಿಗರನ್ನು ಆಕರ್ಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದ ಚೌಟ ಅವರು ಇದೇ ಸಂದರ್ಭದಲ್ಲಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಲ್ಲಿ ವಿನಂತಿಸಿದ್ದಾರೆ.