ವಿಧಾನ ಪರಿಷತ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಶಕ್ತಿ ತೋರಿಸಿ: ದಿನೇಶ್ ಗುಂಡೂರಾವ್ ಕರೆ

Update: 2024-10-11 13:51 GMT

ಸುಳ್ಯ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತನನ್ನು ಗುರುತಿಸಿ ಅಭ್ಯರ್ಥಿಯನ್ನಾಗಿ ಮಾಡಿದೆ. ಅವರನ್ನು ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್‌ನ ಶಕ್ತಿಯನ್ನು ಸಾಬೀತು ಮಾಡಬೇಕು ಎಂದು ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹೇಳಿದ್ದಾರೆ‌.

ಸುಳ್ಯದಲ್ಲಿ ನಡೆದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಈ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಚಲಾವಣೆಯಾಗಬೇಕು. ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಕೆಲಸ‌ ಮಾಡಿದ್ದಾರೆ ಎಂಬ ಸಂದೇಶ ರಾಜ್ಯಕ್ಕೆ ನೀಡಬೇಕು ಎಂದ ಅವರು ಮುಂದಿನ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ಚುನಾವಣೆಗೆ ಇದು ಪೂರ್ವ ತಯಾರಿ. ನಾವೇ ಅಭ್ಯರ್ಥಿ ಎಂದು ತಿಳಿದುಕೊಂಡು ಪ್ರತಿಯೊಬ್ಬರೂ ಶಿಸ್ತಿನಿಂದ ಅಚ್ಚು ಕಟ್ಟಾಗಿ ಕೆಲಸ ಮಾಡಬೇಕು ಎಂದರು.

ಕರಾವಳಿಯಲ್ಲಿ ಕಾಂಗ್ರೆಸ್‌ನ ಗತ ವೈಭವವನ್ನು ಮರು ಸ್ಥಾಪಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಾ ಇದ್ದೇವೆ‌. ಮತ್ತೆ ಕಾಂಗ್ರೆಸ್‌ನ ಗೆಲವಿನ ಪತಾಕೆ ಹಾರಿಸಲು, ಕಾಂಗ್ರೆಸ್‌ನ ಶಕ್ತಿ ತೋರಿಸಲು ಈ ಚುನಾವಣೆ ಒಂದು ಅವಕಾಶ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಮಾತನಾಡಿ ಈ ಚುನಾವಣೆಯಲ್ಲಿ ಗೆಲುವಿಗೆ ಪಕ್ಷಾತೀತವಾಗಿ ಎಲ್ಲರ ಬೆಂಬಲ ಬೇಕಾಗಿದೆ. ಸಾಮಾನ್ಯ ಕಾರ್ಯಕರ್ತನಾದ ನನಗೆ ವಿಧಾನ ಪರಿಷತ್ ಸೀಟ್ ನೀಡಿರುವುದು ಪ್ರತಿಯೊಬ್ಬ ಕಾರ್ಯಕರ್ತನಿಗೆ ನೀಡಿದ ಗೌರವ. ಗೆಲುವಿಗಾಗಿ ಪ್ರತಿಯೊಬ್ಬರೂ ಪ್ರಯತ್ನ ನಡೆಸಬೇಕು ಎಂದು ವಿನಂತಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಿದ್ದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ವಿಧಾನ ಸಭಾ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಪ್ರಧಾ‌ನ ಕಾರ್ಯದರ್ಶಿಗಳಾದ ಟಿ.ಎಂ.ಶಹೀದ್ ತೆಕ್ಕಿಲ್, ಎಂ.ಎಸ್.ಮಹಮ್ಮದ್, ಜಿ.ಎ.ಬಾವ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಸುಳ್ಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಕಾಂಗ್ರೆಸ್ ಮುಖಂಡ ರಾದ ನಿತ್ಯಾನಂದ ಮುಂಡೋಡಿ, ರಾಜೀವಿ ಆರ್.ರೈ, ಎ.ಸಿ.ವಿನಯರಾಜ್, ಕೆ.ಎಂ.ಮುಸ್ತಫ, ಸರಸ್ವತಿ ಕಾಮತ್, ಡಾ.ಬಿ.ರಘು, ಎ‌ಂ.ವೆಂಕಪ್ಪ ಗೌಡ,ಪ್ರದೀಪ್ ಕುಮಾರ್ ರೈ ಪಾಂಬಾರು, ಶಾಫಿ ಕುತ್ತಮೊಟ್ಟೆ, ಇಸ್ಮಾಯಿಲ್ ಪಡ್ಪಿನಂಗಡಿ, ಎಸ್. ಸಂಶುದ್ದೀನ್, ಶಾಹುಲ್ ಹಮೀದ್ ಕುತ್ತಮೊಟ್ಟೆ, ಕೆ.ಪಿ.ಜಾನಿ, ಜಯಪ್ರಕಾಶ್ ನೆಕ್ರಪ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಸ್ವಾಗತಿಸಿ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ವಂದಿಸಿದರು. ಅಶೋಕ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News