ಬಾಂಗ್ಲಾ ದೇಶದಲ್ಲಿ ಹಿಂದುಗಳಿಗೆ ರಕ್ಷಣೆಗೆ ಆಗ್ರಹಿಸಿ ಕಾಂಗ್ರೆಸ್ ಮನವಿ
ಮಂಗಳೂರು: ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದಾಳಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿಬೇಕು ಮತ್ತು ಅವರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನಿಯೋಗ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರದ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.
ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿಯಾಗುತ್ತಿರುವುದು ವರದಿಯಾಗುತ್ತಿದೆ. ಇದು ಖಂಡನೀಯ. ಅಲ್ಲಿನ ಸರಕಾರ ಅಲ್ಪಸಂಖ್ಯಾತ ಹಿಂದೂಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ನಮ್ಮ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾ ದೇಶದ ಸರಕಾರದೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ರಕ್ಷಣೆ ನೀಡುವಲ್ಲಿ ಆಗಿರುವ ವೈಫಲ್ಯತೆಯ ಬಗ್ಗೆ ಕೂಡಲೇ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ನೇತೃತ್ವದಲ್ಲಿ ಕಾಂಗ್ರೆಸ್‌ನ ನಿಯೋಗ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದೆ.
ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಮನವಿ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡಲೇ ಮಣಿಪುರಕ್ಕೆ ಭೇಟಿ ನೀಡಿ, ಅಲ್ಲಿನ ಹಿಂಸಾಚಾರವನ್ನು ತಡೆಯಬೇಕು ಅಥವಾ ಕಾನೂನು ವ್ಯವಸ್ಥೆ ಕಾಪಾಡಲು ವಿಫಲವಾಗಿರುವ ಅಲ್ಲಿನ ರಾಜ್ಯ ಸರಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಈ ಸಂದರ್ಭ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ಮಂಗಳೂರು ನಗರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್, ಮಾಜಿ ಮೇಯರ್ ಅಶ್ರಫ್, ವಿಕಾಸ್ ಶೆಟ್ಟಿ, ಶಾಂತಲಾ ಗಟ್ಟಿ, ಮನೀಶ್ ಬೋಳಾರ್, ಸುನೀಲ್ ಬಜಿಲಕೆರೆ ಮುಂತಾದವರು ಉಪಸ್ಥಿತರಿದ್ದರು.