ಎಸ್ಸಿ-ಎಸ್ಟಿ ಕಾರ್ಯಕ್ರಮಗಳ ಅನುದಾನ ಬಳಕೆಗೆ ಎಡಿಸಿ ಸೂಚನೆ
ಮಂಗಳೂರು, ಮಾ.14: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಅಪರಾಧ ಮತ್ತು ಪರಿಹಾರ ವಿವರಗಳ ಕೈಪಿಡಿಯನ್ನು ಸಮಿತಿ ಸದಸ್ಯರಿಗೆ ನೀಡಿ ಅದರಲ್ಲಿರುವ ಧ್ಯೇಯೋದ್ದೇಶವನ್ನು ಪರಿಪಾಲಿಸಿ ಕೊಂಡು ಹೋಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್ ಹೇಳಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಸಮಿತಿಯಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ನಡೆಸಬೇಕು ಎಂದು ಎಡಿಸಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದರು.
ಜನವರಿ 2025ರಿಂದ ಮಾರ್ಚ್ 12ರವರೆಗೆ ಜಿಲ್ಲೆಯಲ್ಲಿ 7 ಜಾತಿ ನಿಂದನೆ, 1 ಆತ್ಮಹತ್ಯೆ, 1 ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, 5,10,000 ರೂ. ಪರಿಹಾರ ನೀಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಬಳಿಕ ನಡೆದ ಸಫಾಯಿ ಕರ್ಮಚಾರಿಗಳ ನಿಷೇಧ ಮತ್ತು ಪುನರ್ವಸತಿಯ ಜಿಲ್ಲಾ ಮಟ್ಟದ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಲಹೊರುವ ಪದ್ಧತಿ ನಿರ್ಮೂಲನೆಯಾಗಬೇಕು. ಪೌರಕಾರ್ಮಿಕರಿಗೆ ಬೇಕಾಗುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ನೀಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಉಪ ಪೋಲಿಸ್ ಆಯುಕ್ತ ಸಿದ್ದಾರ್ಥ್ ಗೋಯಲ್, ತಾಲೂಕು ತಹಶೀಲ್ದಾರ್‌ಗಳು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಹೇಮಲತಾ ಮತ್ತಿತರರು ಉಪಸ್ಥಿತರಿದ್ದರು.