ವಿಧಾನ ಪರಿಷತ್ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮುಲ್ಲೈ ಮುಗಿಲನ್

Update: 2024-10-19 13:32 GMT

ಮುಲ್ಲೈ ಮುಗಿಲನ್

ಮಂಗಳೂರು: ದ.ಕ. ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್‌ಗೆ ಅ.21ರಂದು ನಡೆಯುವ ಉಪ ಚುನಾವಣೆಗೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿವೆ ಎಂದು ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ. ಈ ಮತಗಟ್ಟೆಗಳಲ್ಲಿ ಸಂಪೂರ್ಣ ವೀಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀೀಕ್ಷಕರುಗಳನ್ನು ನೇಮಕ ಮಾಡಲಾಗಿದೆ ಎಂದರು.

ಈಗಾಗಲೇ ಆಯಾ ಗ್ರಾಪಂಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ ದ.ಕ. ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ 392 ಮತಗಟ್ಟೆಗಳಲ್ಲಿ 6,032 ಮತದಾರರಿದ್ದಾರೆ. ಈ ಪೈಕಿ ದ.ಕ. ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದು ಹೇಳಿದರು.

ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ ಅನುಸಾರ ಮತ ಚಲಾಯಿಸಬೇಕು. ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ 1 ಎಂದು ನಮೂದಿಸುವ ಮೂಲಕ ಮತ ಚಲಾಯಿಸಬೇಕು. ಇಂಗ್ಲಿಷ್ ಕನ್ನಡ ಅಥವಾ ರೋಮನ್ ಅಂಕಿಯಲ್ಲಿ 1 ನಮೂದಿಸಬೇಕು. ಪ್ರಾಶಸ್ತ್ಯವನ್ನು ಅಂಕಿಗಳ ಮೂಲಕ ಮಾತ್ರ ಅಂದರೆ 1,2,3 ಇತ್ಯಾದಿ ಕ್ರಮದಲ್ಲಿ ಗುರುತು ಹಾಕಬೇಕು. ಇದರ ಬದಲಾಗಿ ಒಂದು, ಎರಡು, ಮೂರು, ಇತ್ಯಾದಿ ಅಕ್ಷರಗಳ ರೂಪದಲ್ಲಿ ಬರೆಯಬಾರದು ಎಂದು ಸೂಚನೆ ನೀಡಲಾಗಿದೆ. ಮತ ಚಲಾುಸುವ ಉದ್ದೇಶಕ್ಕಾಗಿ ಮತಗಟ್ಟೆ ಅಧ್ಯಕ್ಷಾಧಿಕಾರಿ (Pಖಔ) ಮತಪತ್ರದೊಡನೆ ನೀಡುವ ನೇರಳೆ ಬಣ್ಣದ ಪೆನ್ನನ್ನು ಮಾತ್ರ ಬಳಸಿ ಮತ ಚಲಾಯಿಸಬೇಕು. ಇತರ ಯಾವುದೇ ಪೆನ್ನು ಅಥವಾ ಗುರುತು ಮಾಡುವ ಸಾಧನವನ್ನು ಬಳಸಿ ಮತ ಚಲಾಯಿಸಿದರೆ ಅಂತಹ ಮತಪತ್ರವನ್ನು ಅಸಿಂಧು ಎಂಬುದಾಗಿ ಪರಿಗಣಿಸಲಾಗುವುದು ಎಂದು ಮುಲ್ಲೈ ಮುಗಿಲನ್ ಹೇಳಿದರು.

ಈಗಾಗಲೇ ಮತ ಚಲಾಯಿಸುವ ವಿಧಾನದ ಬಗ್ಗೆ ಎಲ್ಲಾ ಮತದಾರರಿಗೆ ಮಾಹಿತಿ ನೀಡಲಾಗಿದೆ. ಮೊಬೈಲ್ ಫೋನು ತೆಗೆದುಕೊಂಡು ಹೋಗಲು ಅವಕಾಶ ಇಲ್ಲ. ದ.ಕ. ಜಿಲ್ಲೆಯಲ್ಲಿ 223 ಗ್ರಾಪಂಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ಪಟ್ಟಣ ಪಂಚಾಯತ್‌ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ ಎಂದರು.

ಉಡುಪಿ ಜಿಲ್ಲೆಯಲ್ಲಿ 153 ಗ್ರಾಪಂಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ 1 ಪಟ್ಟಣ ಪಂಚಾಯತ್‌ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಮತಗಟ್ಟೆಗಳಿಗೆ ಭದ್ರತೆಯ ಬಗ್ಗೆ ಸಂಬಂದಿಸಿದಂತೆ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರ ಮತ್ತು ಪೊಲೀಸ್‌ಆಯುಕ್ತರ ವ್ಯಾಪ್ತಿಯಲ್ಲಿ 540 ಪೊಲೀಸ್ ಅಧಿಕಾರಿ/ಸಿಬ್ಬಂದಿಗಳನ್ನು ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್ ಅಧಿಕಾರಿ/ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು,ಜನಸಂದಣಿ, ಗುಂಪಾಗಿ ಜನ ಸೇರದಂತೆ ಸೂಚಿಸಲಾಗಿದೆ. ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂಧಿಸಿದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News