ಸೌಜನ್ಯಾ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಆ.27ರಂದು ಧರಣಿ: ನಳಿನ್ ಕುಮಾರ್ ಕಟೀಲು
ಮಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಹತ್ಯೆ-ಅತ್ಯಾಚಾರ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.27ರಂದು ಬಿಜೆಪಿ ವತಿಯಿಂದ ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಬೃಹತ್ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಜನ್ಯಾ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆದರೂ ಆರೋಪಿ ಯಾರೆಂಬುದು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ದೊರಕಬೇಕೆನ್ನುವುದು ಬಿಜೆಪಿಯ ನಿಲುವು. ಆ ಕಾಲಣದಿಂದ ಮರುತನಿಖೆ ನಡೆಸಬೇಕೆನ್ನುವುದು ನಮ್ಮ ಆಗ್ರಹ. ಧರಣಿಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ನಾಯ್ಕ್ ಕುಯಿಲಾಡಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು.