ಸಜಿಪ ಮೂಡ ಗ್ರಾ.ಪಂ.: ಅಧ್ಯಕ್ಷರಾಗಿ ಶೋಭಾ ಶೆಟ್ಟಿ, ಉಪಾಧ್ಯಕ್ಷರಾಗಿ ಫೌಝಿಯ ಆಯ್ಕೆ

Update: 2023-08-16 16:52 GMT

ಬಂಟ್ವಾಳ : ಸಜಿಪ ಮೂಡ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶೋಭಾ ಶೆಟ್ಟಿ ಅವಿರೋಧವಾಗಿ ಹಾಗೂ ಉಪಾಧ್ಯಕ್ಷರಾಗಿ ಫೌಝಿಯ ಅವರು ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.

ಪಂಚಾಯತ್ ಒಟ್ಟು 20 ಸದಸ್ಯ ಬಲ ಹೊಂದಿದ್ದು 11 ಮಂದಿ ಕಾಂಗ್ರೆಸ್ ಬೆಂಬಲಿತ ಹಾಗೂ 9 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು.

ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ ಮೀಸಲಾತಿ ನಿಗದಿಯಾಗಿತ್ತು. ಬಿಜೆಪಿ ಬೆಂಬಲಿತರ ಪೈಕಿ ಅಭ್ಯರ್ಥಿಗಳು ಇಲ್ಲದ ಕಾರಣ ಶೋಭಾ ಶೆಟ್ಟಿ ಅವಿರೋಧವಾಗಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಫೌಝಿಯ ಆಯ್ಕೆಯಾಗಿದ್ದಾರೆ.

ಸಣ್ಣ ನೀರಾವರಿ ಉಪ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಶಿವಪ್ರಸನ್ನ ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಯಾ ಸಹಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News