ಒಡಿಶಾ | ಮತಾಂತರ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ಮೂವರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಗುಂಪು
ಬಾಲಸೋರ್ (ಒಡಿಶಾ): ಕೆಲವು ಆದಿವಾಸಿ ಕುಟುಂಬಗಳನ್ನು ಮತಾಂತರ ಮಾಡಲು ಯತ್ನಿಸಲಾಗುತ್ತಿದೆ ಎಂಬ ಶಂಕೆಯ ಮೇಲೆ ಗುಂಪೊಂದು ಮೂವರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯು ಗುರುವಾರ ಗೋವರ್ಧನಪುರ್ ಗ್ರಾಮದಲ್ಲಿ ನಡೆದಿದ್ದು, ನಂತರ, ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ ಎಂದು ಅವರು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸೇರಿದಂತೆ ಒಟ್ಟು ಮೂರು ಮಂದಿಯನ್ನು ರಕ್ಷಿಸಿದ್ದಾರೆ ಎಂದು ರೆಮುನ ಪೊಲೀಸ್ ಠಾಣೆಯ ಠಾಣಾಧಿಕಾರಿ ಸುಭಾಷ್ ಚಂದ್ರ ಮಲಿಕ್ ತಿಳಿಸಿದ್ದಾರೆ.
“ಪ್ರಾಥಮಿಕ ತನಿಖೆಯ ನಂತರ, ಎರಡು ಗುಂಪುಗಳ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಈ ಸಂಬಂಧ ತನಿಖೆ ಪ್ರಗತಿಯಲ್ಲಿದೆ” ಎಂದು ಅವರು ಹೇಳಿದ್ದಾರೆ.
“ಗ್ರಾಮದಲ್ಲಿ ಶಾಂತಿಯನ್ನು ಕಾಪಾಡಲು ಹಾಗೂ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಉಲ್ಲಂಘನೆ ಪರಿಸ್ಥಿತಿಯನ್ನು ತಪ್ಪಿಸಲು ಪ್ರಯತ್ನಗಳನ್ನು ನಡೆಸಲಾಗುತ್ತಿದೆ” ಎಂದೂ ಅವರು ತಿಳಿಸಿದ್ದಾರೆ.