ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷವನ್ನು ಆರೋಪಿಯನ್ನಾಗಿ ಮಾಡಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಈಡಿ
ಹೊಸದಿಲ್ಲಿ: ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷವನ್ನು ಆರೋಪಿಯನ್ನಾಗಿ ಮಾಡಲಾಗುವುದು ಎಂದು ಜಾರಿ ನಿರ್ದೇಶನಾಲಯ ದಿಲ್ಲಿ ಹೈಕೋರ್ಟ್‌ಗೆ ತಿಳಿಸಿದೆ. ಈ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಮೂವರು ಪ್ರಮುಖ ನಾಯಕರನ್ನು ಜೈಲಿಗೆ ತಳ್ಳಲಾಗಿದ್ದರರೂ, ರಾಜಕೀಯ ಪಕ್ಷವೊಂದು ಪ್ರಕರಣದಲ್ಲಿ ಆರೋಪಿಯಾಗುತ್ತಿರುವುದು ಇದೇ ಮೊದಲು.
ಎಎಪಿ ನಾಯಕ ಹಾಗೂ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ತನಿಖಾ ಸಂಸ್ಥೆಯು ಈ ವಿಷಯವನ್ನು ನ್ಯಾಯಾಲಯಕ್ಕೆ ತಿಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರಕ ಆರೋಪಪಟ್ಟಿ ಸಲ್ಲಿಸಲಾಗುವುದು, ಅದರಲ್ಲಿ ಎಎಪಿ ಪಕ್ಷವನ್ನು ಕೂಡಾ ಹೆಸರಿಸಲಾಗುವುದು ಎಂದು ಈಡಿ ತಿಳಿಸಿದೆ.
ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಬಂದಿದೆ.