ವಕ್ಫ್ ತಿದ್ದುಪಡಿ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಆಪ್ ಶಾಸಕ

ಆಪ್ ಶಾಸಕ ಅಮಾನತುಲ್ಲಾ ಖಾನ್ (PTI)
ಹೊಸದಿಲ್ಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆಯನ್ನು ಪ್ರಶ್ನಿಸಿ ಆಪ್ ಪಕ್ಷ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಈ ಮೊದಲು ಎಐಎಂಐಎಂ ಮತ್ತು ಕಾಂಗ್ರೆಸ್ ಪಕ್ಷ ವಕ್ಫ್ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಶನಿವಾರ ಆಪ್ ಶಾಸಕ ಅಮಾನತುಲ್ಲಾ ಖಾನ್ ಮಸೂದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ʼತಿದ್ದುಪಡಿಯು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯುತ್ತತೆಗೆ ಧಕ್ಕೆಯುಂಟುಮಾಡುತ್ತದೆ. ಶಾಸನವು ಸಮಾನತೆಯ ಸ್ವಾತಂತ್ರ್ಯ, ಧಾರ್ಮಿಕ ವ್ಯವಹಾರಗಳ ನಿರ್ವಹಣೆ ಮತ್ತು ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆʼ ಎಂದು ಆಪ್ ಶಾಸಕ ಅಮಾನತುಲ್ಲಾ ಖಾನ್ ಅರ್ಜಿಯಲ್ಲಿ ಪ್ರತಿಪಾದಿಸಿದರು.
ವಕ್ಫ್ ಆಸ್ತಿಗಳನ್ನು ನಿಯಂತ್ರಿಸುವ 1995ರ ವಕ್ಫ್ ಕಾನೂನಿಗೆ ತಿದ್ದುಪಡಿ ಮಾಡಲು ಪ್ರಯತ್ನಿಸುವ ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ವಿರೋಧ ಪಕ್ಷಗಳು ಕಳವಳವನ್ನು ವ್ಯಕ್ತಪಡಿಸಿವೆ. ಪ್ರಸ್ತಾವಿತ ಕಾನೂನು ತಾರತಮ್ಯದಿಂದ ಕೂಡಿದೆ ಮತ್ತು ಮುಸ್ಲಿಮರನ್ನು ಗುರಿಯಾಗಿಸುತ್ತದೆ ಎಂದು ವಿಪಕ್ಷಗಳು ಹೇಳಿವೆ.