ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಏಕಾಂಗಿ ಸ್ಪರ್ಧೆ: ಕೇಜ್ರಿವಾಲ್ ಘೋಷಣೆ
Update: 2024-12-01 07:33 GMT
ಹೊಸದಿಲ್ಲಿ: ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
70 ಸದಸ್ಯ ಬಲದ ದಿಲ್ಲಿ ವಿಧಾನಸಭಾ ಚುನಾವಣೆ ಮುಂದಿನ ವರ್ಷದ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ, ಈ ವರ್ಷಾರಂಭದಲ್ಲಿ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿದ್ದ ಆಮ್ ಆದ್ಮಿ ಪಕ್ಷ, ಯಾವುದೇ ಕ್ಷೇತ್ರದಲ್ಲೂ ಗೆಲುವು ಸಾಧಿಸಲಾಗದೆ ತೀವ್ರ ಹಿನ್ನಡೆ ಅನುಭವಿಸಿತ್ತು. ದಿಲ್ಲಿಯ ಎಲ್ಲ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತ್ತು.
ಈ ಹಿನ್ನೆಲೆಯಲ್ಲಿ, ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಂಗಪಕ್ಷವಾಗಿರುವ ಆಮ್ ಆದ್ಮಿ ಪಕ್ಷವು ಮುಂಬರುವ ದಿಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರಕ್ಕೆ ಬಂದಿದೆ ಎಂದು ಹೇಳಲಾಗಿದೆ.