ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಖಂಡನೆ; ವಕ್ಫ್ ಮಸೂದೆ ಪ್ರತಿಭಟನೆ ತಾತ್ಕಾಲಿಕ ಸ್ಥಗಿತ

Update: 2025-04-24 11:30 IST
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಖಂಡನೆ; ವಕ್ಫ್ ಮಸೂದೆ ಪ್ರತಿಭಟನೆ ತಾತ್ಕಾಲಿಕ ಸ್ಥಗಿತ

Photo credit: PTI

  • whatsapp icon

ಹೊಸದಿಲ್ಲಿ: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಬುಧವಾರ ಖಂಡಿಸಿದೆ. ಸಂತ್ರಸ್ತರ ಕುಟುಂಬಗಳೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ವಕ್ಫ್ ತಿದ್ದುಪಡಿ ಕಾನೂನಿನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಮೂರು ದಿನಗಳವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ ನಲ್ಲಿರುವ ಪ್ರಮುಖ ಪ್ರವಾಸಿ ತಾಣದಲ್ಲಿ ಎಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 26 ಜನರು ಮೃತಪಟ್ಟಿದ್ದರು.

ಈ ಘಟನೆಗೆ ಸಂತಾಪ ಸೂಚಿಸಿ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ), ವಕ್ಫ್ ಕಾನೂನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮೃತರ ಕುಟುಂಬಗಳೊಂದಿಗೆ ಒಗ್ಗಟ್ಟಿನ ಸಂಕೇತವಾಗಿ, ವಕ್ಫ್ ಕಾಯ್ದೆಗೆ ವಿವಾದಾತ್ಮಕ ತಿದ್ದುಪಡಿಗಳ ವಿರುದ್ಧದ ಪ್ರತಿಭಟನೆಯನ್ನು ಎಪ್ರಿಲ್ 23 ರಿಂದ ಮೂರು ದಿನಗಳವರೆಗೆ ಸ್ಥಗಿತಗೊಳಿಸಿದೆ ಎಂದು ಹೇಳಿಕೆ ತಿಳಿಸಿದೆ.

ವಕ್ಫ್ ರಕ್ಷಣೆಗಾಗಿನ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿಯ ಮಜ್ಲಿಸ್-ಎ-ಅಮಲ್‌ನ ರಾಷ್ಟ್ರೀಯ ಸಂಚಾಲಕ ಸೈಯದ್ ಖಾಸಿಂ ರಸೂಲ್ ಇಲ್ಯಾಸ್ ಅವರು ನೀಡಿರುವ ಹೇಳಿಕೆಯಲ್ಲಿ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಖಂಡನೀಯ. ಆದ್ದರಿಂದ, ಸಂತ್ರಸ್ತರ ಕುಟುಂಬಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಮತ್ತು ಮೃತಪಟ್ಟವರಿಗೆ ಸಂತಾಪ ಸೂಚಿಸಲು ವಕ್ಫ್ ರಕ್ಷಣಾ ಅಭಿಯಾನದ ಅಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಮೂರು ದಿನಗಳವರೆಗೆ ಸ್ಥಗಿತಗೊಳಿಸಲು ಮಂಡಳಿಯು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಇಲ್ಯಾಸ್ ಅವರು ಈ ಕುರಿತು ಅಭಿಯಾನದ ರಾಜ್ಯ ಮತ್ತು ಜಿಲ್ಲಾ ಸಂಚಾಲಕರಿಗೆ ಸುತ್ತೋಲೆ ಹೊರಡಿಸಿ, ಮೂರು ದಿನಗಳವರೆಗೆ ಎಲ್ಲಾ ಪ್ರಚಾರ ಚಟುವಟಿಕೆಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಸೂಚಿಸಿದ್ದಾರೆ.

ಈ ಅವಧಿಯ ನಂತರ ಅಭಿಯಾನವು ಪುನರಾರಂಭಗೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News