ವಿಧಾನಸಭಾ ಚುನಾವಣಾ ಫಲಿತಾಂಶ| ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ 23 ಸ್ಥಾನಗಳಲ್ಲಿ ಗೆಲುವು; ಸಿಕ್ಕಿಂನಲ್ಲಿ ಎಸ್‌ಕೆಎಂ ಗೆ 11 ಸ್ಥಾನಗಳಲ್ಲಿ ಜಯ
ಹೊಸದಿಲ್ಲಿ: ಅರುಣಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಯು 23 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, 23 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳುವ ಹಾದಿಯಲ್ಲಿರುವುದು ಚುನಾವಣಾ ಆಯೋಗದ ದತ್ತಾಂಶಗಳಿಂದ ವ್ಯಕ್ತವಾಗಿದೆ.
ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯು ಈಗಾಗಲೇ 10 ವಿಧಾನಸಭಾ ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದೆ. ಈ ಪೈಕಿ ಮುಖ್ಯಮಂತ್ರಿ ಪೇಮಾ ಖಂಡು ಹಾಗೂ ಉಪ ಮುಖ್ಯಮಂತ್ರಿ ಚೌನಾ ಮೇಯ್ನ್ ಕ್ರಮವಾಗಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಅರುಣಾಚಲ ಪ್ರದೇಶ ವಿಧಾನಸಭೆಯ ಬಹುಮತದ ಗಡಿ 31 ಸ್ಥಾನಗಳಾಗಿವೆ.
ಅರುಣಾಚಲ ಪ್ರದೇಶದ ಪ್ರಮುಖ ವಿರೋಧ ಪಕ್ಷವಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅರುಣಾಚಲ ಪ್ರದೇಶದ ಮತ್ತೊಂದು ಪ್ರಾದೇಶಿಕ ಪಕ್ಷವಾದ ದಿ ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಎನ್ಸಿಪಿ ಪಕ್ಷವು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಖೋನ್ಸಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ವಾಂಗ್ಲಂ ಸಾವಿನ್ ಗೆಲುವು ಸಾಧಿಸಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿರುವುದರಿಂದ, ರಸ್ತೆಗಳಲ್ಲಿ ಜನರು ಸಂಭ್ರಮಾಚರಣೆಯಲ್ಲಿ ತೊಡಗಿರುವ ದೃಶ್ಯಗಳು ಕಂಡು ಬರುತ್ತಿವೆ.