ಕಾನ್ಪುರ | ವಿವಾಹವಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ : ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕನ ಬಂಧನ

Update: 2025-01-07 13:42 GMT

ಸಾಂಧರ್ಬಿಕ ಚಿತ್ರ

ಕಾನ್ಪುರ : ವಿವಾಹವಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ದಿಲೀಪ್ ಸಿಂಗ್ ಬಜರಂಗಿ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಗೋವಿಂದ್ ನಗರ ಪೊಲೀಸ್ ಠಾಣೆಯ ಹೊರಗೆ ತನ್ನ ಮುಖದ ಮೇಲೆ ಸೀಮೆಎಣ್ಣೆ ಸುರಿದುಕೊಂಡು ದಿಲೀಪ್ ಸಿಂಗ್ ಬಜರಂಗಿ ಆತ್ಮಹತ್ಯೆಗೆ ಯತ್ನಿಸಿದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ(ದಕ್ಷಿಣ) ಮಹೇಶ್ ಕುಮಾರ್ ತಿಳಿಸಿದ್ದಾರೆ.

ವಿವಾಹವಾಗುವ ನೆಪದಲ್ಲಿ ಭಜರಂಗಿ ತನ್ನೊಂದಿಗೆ ಸ್ನೇಹ ಬೆಳೆಸಿ ಘಂಟಾಘರ್ ನ ಹೋಟೆಲ್‌ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಅಶ್ಲೀಲ ವೀಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ಮಹಿಳೆಯೋರ್ವರು ಕಲೆಕ್ಟರ್‌ ಗಂಜ್‌ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ತನಿಖೆ ಆರಂಭಿಸಲಾಗಿತ್ತು. ಆದರೆ, ಕಾನ್ಪುರದ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ದಿಲೀಪ್ ಸಿಂಗ್ ಬಜರಂಗಿ ತಲೆಮರೆಸಿಕೊಂಡಿದ್ದ ಎಂದು ಡಿಸಿಪಿ ಮಹೇಶ್ ಕುಮಾರ್ ಹೇಳಿದ್ದಾರೆ.

ಸೋಮವಾರ ಇದ್ದಕ್ಕಿದ್ದಂತೆ ಪ್ರತ್ಯಕ್ಷನಾದ ದಿಲೀಪ್ ಸಿಂಗ್ ಬಜರಂಗಿ ತನ್ನ ಬೆಂಬಲಿಗರು ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ಗೋವಿಂದ್ ನಗರ ಪೊಲೀಸ್ ಠಾಣೆಗೆ ತೆರಳಿ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಸ್ಟ್ರೀಮ್ ನಲ್ಲಿ ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದ್ದಾನೆ. ಸಾರ್ವಜನಿಕರ ಮಧ್ಯೆ ಪೊಲೀಸ್ ಠಾಣೆಯ ಹೊರಗೆ ಆತ್ಮಹತ್ಯೆಗೆ ಯತ್ನಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಜರಂಗಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಮಹೇಶ್ ಕುಮಾರ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News