ಕೋರ್ಟ್ ರೂಂನಲ್ಲಿ ಮೊಬೈಲ್ ಬಳಸಲು ಇದೇನು ಸಂತೆಯೆ?: ವಕೀಲರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ ಚಂದ್ರಚೂಡ್
ಹೊಸದಿಲ್ಲಿ: “ಇದೇನು ಸಂತೆಯೆ? ನೀವು ಫೋನ್ ನಲ್ಲಿ ಮಾತನಾಡುತ್ತಿದ್ದೀರಿ?” – ಸೋಮವಾರ ಕೋರ್ಟ್ ರೂಂನಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವಕೀಲರೊಬ್ಬರನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ನ್ಯಾ. ಜೆ.ಬಿ.ಪರ್ದಿವಾಲಾ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದಲ್ಲಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಸದರಿ ವಕೀಲ ಮೊಬೈಲ್ ಅನ್ನು ವಶಪಡಿಸಿಕೊಳ್ಳುವಂತೆ ನ್ಯಾಯಾಲಯದ ಸಿಬ್ಬಂದಿಗಳಿಗೆ ಆದೇಶಿಸಿದರು ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.
“ಇದೇನು ಸಂತೆಯೆ? ನೀವು ಫೋನ್ ನಲ್ಲಿ ಮಾತನಾಡುತ್ತಿದ್ದೀರಿ? ಅವರ ಮೊಬೈಲ್ ಅನ್ನು ವಶಪಡಿಸಿಕೊಳ್ಳಿ ಎಂದು ನ್ಯಾಯಾಲಯದ ಸಿಬ್ಬಂದಿಗೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನಿರ್ದೇಶನ ನೀಡಿದರು.
ಕೋರ್ಟ್ ರೂಮ್ ನಲ್ಲೇ ಆ ವಕೀಲರು ಮೊಬೈಲ್ ನಲ್ಲಿ ಮಾತನಾಡುತ್ತಿದ್ದುದರಿಂದ ವಿಚಾರಣೆಯನ್ನು ಸ್ಥಗಿತಗೊಳಿಸಿದ ಮುಖ್ಯ ನ್ಯಾಯಮೂರ್ತಿಗಳು, ಅವರನ್ನೇ ನೇರವಾಗಿ ಉದ್ದೇಶಿಸಿ ಮಾತನಾಡಿದರು.
“ಭವಿಷ್ಯದಲ್ಲಿ ಎಚ್ಚರಿಕೆಯಿಂದ ಇರಿ. ನ್ಯಾಯಾಧೀಶರು ಎಲ್ಲವನ್ನೂ ಗಮನಿಸುತ್ತಾರೆ. ನಾವು ದಾಖಲೆಗಳನ್ನು ನೋಡುತ್ತಿದ್ದರೂ, ನಮ್ಮ ಕಣ್ಣುಗಳು ಎಲ್ಲೆಡೆಯೂ ಇರುತ್ತವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಆ ವಕೀಲರಿಗೆ ಕಠಿಣ ಎಚ್ಚರಿಕೆ ರವಾನಿಸಿದರು.