ಸಿಎಂ ಆದಿತ್ಯನಾಥ್ ಚುನಾವಣಾ ಪ್ರಚಾರದಿಂದ ಹಿಂದೆ ಸರಿದು, ಕಳಪೆ ಆರೋಗ್ಯ ಪರಿಸ್ಥಿತಿಗಳತ್ತ ಗಮನ ನೀಡಬೇಕು: ಅಖಿಲೇಶ್ ಯಾದವ್
ಲಕ್ನೊ: ಮುಖ್ಯಮಂತ್ರಿ ಆದಿತ್ಯನಾಥ್ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣಾ ಪ್ರಚಾರದಿಂದ ಹಿಂದೆ ಸರಿದು, ಕಳಪೆ ಆರೋಗ್ಯ ಮತ್ತು ವೈದ್ಯಕೀಯ ಸೌಕರ್ಯಗಳ ಸ್ಥಿತಿಯ ಕುರಿತು ಗಮನ ಹರಿಸಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸಲಹೆ ನೀಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, ಝಾನ್ಸಿ ವೈದ್ಯಕೀಯ ಕಾಲೇಜಿನ ಎನ್ಐಸಿಯುನಲ್ಲಿ ನಡೆದಿರುವ ಅಗ್ನಿ ದುರಂತದಲ್ಲಿ ತಮ್ಮ ಮಕ್ಕಳನ್ನು ಕಳೆದುಕೊಂಡಿರುವ ದುಃಖತಪ್ತ ಕುಟುಂಬಗಳಿಗೆ ಬಿಜೆಪಿ ಸರಕಾರವು ರೂ. ಒಂದು ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದು, “ಮತ್ತೆ ಗೋರಖ್ ಪುರ್ ದುರಂತ ಮರುಕಳಿಸಬಾದು” ಎಂದೂ ಎಚ್ಚರಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಸಂತ್ರಸ್ತ ಕುಟುಂಬಗಳಿಗೆ ಸರಕಾರವು ಸಾಧ್ಯವಾದ ಎಲ್ಲ ನೆರವೂ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಯಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.