ಡಿಜಿಟಲ್ ಅರೆಸ್ಟ್ ಪ್ರಕರಣಗಳ ಕುರಿತ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ
ಹೊಸದಿಲ್ಲಿ : ಡಿಜಿಟಲ್ ಅರೆಸ್ಟ್ ಮತ್ತು ಸೈಬರ್ ವಂಚನೆ ಪ್ರಕರಣಗಳ ಕುರಿತು ತನಿಖೆಗಾಗಿ ಕೇಂದ್ರ ಗೃಹ ಸಚಿವಾಲಯ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಸಮಿತಿಗೆ ಸೂಚಿಸಲಾಗಿದೆ.
ಮೂಲಗಳ ಪ್ರಕಾರ, ಸಮಿತಿಯು ಗೃಹ ಸಚಿವಾಲಯದ ಆಂತರಿಕ ಭದ್ರತಾ ಕಾರ್ಯದರ್ಶಿಯ ಮೇಲ್ವಿಚಾರಣೆಯಲ್ಲಿರುತ್ತದೆ.
ಸಚಿವಾಲಯದ ಸೈಬರ್ ಅಪರಾಧ ಸಮನ್ವಯ ಕೇಂದ್ರವು, ಸಮಿತಿಯ ಬಗ್ಗೆ ತಿಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸರನ್ನು ಸಂಪರ್ಕಿಸಿದೆ. 2024ರ ಆರಂಭದಿಂದ ಇಲ್ಲಿಯವರೆಗೆ, 6,000ಕ್ಕೂ ಹೆಚ್ಚು ಡಿಜಿಟಲ್ ಅರೆಸ್ಟ್ ದೂರುಗಳು ದಾಖಲಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಲಕ್ಷ ಮೊಬೈಲ್ ಸಂಖ್ಯೆಗಳನ್ನು ನಿರ್ಬಂಧಿಸಿದೆ.
ಸೈಬರ್ ಅಪರಾಧ ಸಮನ್ವಯ ಕೇಂದ್ರವು ಕನಿಷ್ಠ 709 ಮೊಬೈಲ್ ಅಪ್ಲಿಕೇಶನ್ಗಳನ್ನು ನಿರ್ಬಂಧಿಸಿದೆ. ಸೈಬರ್ ವಂಚನೆಗೆ ಸಂಬಂಧಿಸಿದಂತೆ 3.25 ಲಕ್ಷ ನಕಲಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವಂತೆ ಸೂಚಿಸಿದೆ. ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಹೆಚ್ಚಳದ ಬಗೆಗಿನ ವರದಿಯ ಬೆನ್ನಲ್ಲಿ ಈ ಕುರಿತು ತನಿಖೆಗೆ ಸಮಿತಿ ರಚಿಸಲಾಗಿದೆ.