ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಕಾಂಗ್ರೆಸ್ ಸಂಸದ ಮುಹಮ್ಮದ್ ಜಾವೇದ್
Update: 2025-04-04 17:04 IST

Photo Credit: X/@DrMdJawaid1
ಹೊಸದಿಲ್ಲಿ : ವಕ್ಫ್ ತಿದ್ದುಪಡಿ ಮಸೂದೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಮುಹಮ್ಮದ್ ಜಾವೇದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾವೇದ್ ಅವರು 2024ರ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಸದಸ್ಯರಾಗಿದ್ದರು. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿದೆ.
ವಕೀಲ ಅನಾಸ್ ತನ್ವೀರ್ ಮೂಲಕ ಸಂಸದ ಜಾವೇದ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಈ ಕಾಯಿದೆಯು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ವಕ್ಫ್ ತಿದ್ದುಪಡಿ ಮಸೂದೆಯು ಸಮಾನತೆಯ ಹಕ್ಕು, ಧರ್ಮವನ್ನು ಆಚರಿಸುವ ಸ್ವಾತಂತ್ರ್ಯ, ಧಾರ್ಮಿಕ ಸ್ವಾತಂತ್ರ್ಯ, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಆಸ್ತಿ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.