ಪಹಲ್ಗಾಮ್ ದಾಳಿ ಬಗ್ಗೆ ಪಕ್ಷದ ನಿಲುವು ಅನುಸರಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು : ನಾಯಕರಿಗೆ ಕಾಂಗ್ರೆಸ್ ಎಚ್ಚರಿಕೆ

PC : PTI
ಹೊಸದಿಲ್ಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಂಗೀಕರಿಸಿದ ನಿರ್ಣಯಕ್ಕೆ ಬದ್ಧವಾಗಿರುವಂತೆ ಕಾಂಗ್ರೆಸ್ ಪಕ್ಷವು ನಾಯಕರು ಮತ್ತು ವಕ್ತಾರರಿಗೆ ನಿರ್ದೇಶನ ನೀಡಿದೆ. ನಿರ್ದೇಶನ ಪಾಲಿಸಲು ವಿಫಲವಾದರೆ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದೆ.
ಎಪ್ರಿಲ್ 24ರಂದು ಸರ್ವಾನುಮತದಿಂದ ಅಂಗೀಕರಿಸಿದ ನಿರ್ಣಯದಲ್ಲಿ 26 ಪ್ರವಾಸಿಗರ ಹತ್ಯೆಗೆ ಕಾರಣವಾದ ದಾಳಿಯ ಬಗ್ಗೆ ಪಕ್ಷದ ಅಧಿಕೃತ ನಿಲುವನ್ನು ವಿವರಿಸಲಾಗಿದೆ.
ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಉದ್ದೇಶಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಏಕತೆ, ಪ್ರಬುದ್ಧತೆ ಮತ್ತು ಜವಾಬ್ದಾರಿಯ ಮಹತ್ವವನ್ನು ಹೇಳಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಕಾಂಗ್ರೆಸ್ ಪಕ್ಷ ತೀವ್ರವಾಗಿ ದುಃಖಿತವಾಗಿದೆ ಮತ್ತು ಈ ದುಃಖದ ಸಮಯದಲ್ಲಿ ರಾಷ್ಟ್ರದೊಂದಿಗೆ ಅಚಲವಾದ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ವೇಣುಗೋಪಾಲ್ ಪತ್ರದಲ್ಲಿ ಹೇಳಿದ್ದಾರೆ.
2025ರ ಎಪ್ರಿಲ್ 24ರಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಹಲ್ಗಾಮ್ ದಾಳಿಯ ಬಗ್ಗೆ ಪಕ್ಷದ ಸ್ಪಷ್ಟ ನಿಲುವನ್ನು ತಿಳಿಸುವ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿತು. ಪಕ್ಷದ ನಾಯಕರು, ವಕ್ತಾರರು, ಮಾಧ್ಯಮ ವಕ್ತಾರರು CWC ನಿರ್ಣಯಕ್ಕೆ ಕಟ್ಟುನಿಟ್ಟಾಗಿ ಬದ್ಧವಾಗಿರಬೇಕು ಎಂದು ಈ ಮೂಲಕ ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡುವಾಗ ಅತ್ಯಂತ ಶಿಸ್ತು ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಬೇಕು. ನಿರ್ದೇಶನದ ಉಲ್ಲಂಘನೆ ಮಾಡಿದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೇಣುಗೋಪಾಲ್ ಪತ್ರದಲ್ಲಿ ಹೇಳಿದ್ದಾರೆ.