ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ: ಸುಪ್ರೀಂ ಕೋರ್ಟ್ ಎಚ್ಚರಿಕೆ
ಹೊಸದಿಲ್ಲಿ: ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಕ್ರಮ ಕೈಗೊಳ್ಳದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಚಾಲನೆ ನೀಡಬೇಕಾಗುತ್ತದೆ ಎಂದು ಬುಧವಾರ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
ಈ ವಿಷಯದಲ್ಲಿ ಹಲವಾರು ರಾಜ್ಯಗಳು ಕ್ರಮ ಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಅಮಿಕಸ್ ಕ್ಯೂರಿಯಾಗಿ ನೆರವು ನೀಡುತ್ತಿರುವ ಹಿರಿಯ ವಕೀಲ ಶಾದನ್ ಫರಾಸತ್ ನ್ಯಾಯಾಲಯಕ್ಕೆ ಸಲ್ಲಿಸಿದ ಟಿಪ್ಪಣಿಯನ್ನು ನ್ಯಾ. ಅಭಯ್ ಎಸ್.ಓಕಾ ಹಾಗೂ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ ಗಂಭೀರವಾಗಿ ಪರಿಗಣಿಸಿತು.
“ಈ ವಿಷಯದಲ್ಲಿ ಕ್ರಮ ಕೈಗೊಳ್ಳದ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕಂಡು ಬಂದರೆ, ನಾವು ನ್ಯಾಯಾಂಗ ನಿಂದನೆ ಕಾಯ್ದೆ, 1971ರ ಅನ್ವಯ ಸಂಬಂಧಿತ ರಾಜ್ಯಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಗೆ ಚಾಲನೆ ನೀಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸುತ್ತಿದ್ದೇವೆ” ಎಂದು ನ್ಯಾಯಪೀಠ ಎಚ್ಚರಿಸಿತು.
ಪತಂಜಲಿ ಆಯುರ್ವೇದ್ ಲಿಮಿಟೆಡ್ ಸಂಸ್ಥೆಯು ಕೋವಿಡ್ ಲಸಿಕೆ ಅಭಿಯಾನ ಹಾಗೂ ಆಧುನಿಕ ವೈದ್ಯಕೀಯ ಪದ್ಧತಿ ವಿರುದ್ಧ ಸುಳ್ಳು ಪ್ರಚಾರ ನಡೆಸುತ್ತಿದೆ ಎಂದು ಆರೋಪಿಸಿ 2022ರಲ್ಲಿ ಭಾರತೀಯ ವೈದ್ಯಕೀಯ ಒಕ್ಕೂಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ದಾರಿ ತಪ್ಪಿಸುವ ಜಾಹೀರಾತುಗಳ ಕುರಿತು ಸುಪ್ರೀಂ ಕೋರ್ಟ್ ಗಮನಕ್ಕೆ ಬಂದಿತ್ತು.