ಪಶ್ಚಿಮ ಕರಾವಳಿಯಲ್ಲಿ ಮುಂದುವರಿದ ಭಾರೀ ಮಳೆ

Update: 2024-07-15 15:49 GMT

ಸಾಂದರ್ಭಿಕ ಚಿತ್ರ | PTI 

ಹೊಸದಿಲ್ಲಿ : ದೇಶದ ಪಶ್ಚಿಮ ಕರಾವಳಿಯ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಹಾಗೂ ಬಿರುಗಾಳಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳ ಅನೇಕ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

‘‘ಮುಂಗಾರು ಇಂದಿನಿಂದ ಕೆಳಮುಖವಾಗಿ ಚಲಿಸುತ್ತಿದೆ. ನಾವು ಕರಾವಳಿ ಕರ್ನಾಟಕ, ಕೇರಳ ಹಾಗೂ ಕೊಂಕಣ ಗೋವಾಗಳಿಗೆ ಮುಂದಿನ ದಿನಗಳಲ್ಲಿ ರೆಡ್ ಅಲರ್ಟ್ ಘೋಷಿಸಲಿದ್ದೇವೆ. ಅಲ್ಲಿ 20 ಸೆ.ಮೀ.ಗೂ ಅಧಿಕ ಮಳೆ ಬೀಳುವ ಸಾಧ್ಯತೆ ಇದೆ. ದಿಲ್ಲಿ-ಎನ್‌ಸಿಆರ್‌ನಲ್ಲಿ ಮುಂದಿನ ದಿನಗಳಲ್ಲಿ ಲಘು ಮಳೆ ಬೀಳಲಿದೆ’’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯ ವಿಜ್ಞಾನಿ ಡಾ. ನರೇಶ್ ಕುಮಾರ್ ತಿಳಿಸಿದ್ದಾರೆ.

ಕೇರಳದ ತಿರುವನಂತಪುರಂ ಹಾಗೂ ಕೊಲ್ಲಂ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆ ಹಾಗೂ ಗಂಟೆಗೆ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ರಾಜ್ಯದ ಆಲಪ್ಪುಳ ಹಾಗೂ ಎರ್ನಾಕುಳಂ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ ಬೀಳಲಿದೆ ಎಂದು ಭಾರತ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.

ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ತ್ರಿಶೂರ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು, ಕಾಸರಗೋಡು, ಎರ್ನಾಕುಳಂ ಹಾಗೂ ವಯನಾಡ್‌ನಲ್ಲಿ ಅಲ್ಲಿನ ಜಿಲ್ಲಾಡಳಿತ ಸೋಮವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿತ್ತು.

ಕರ್ನಾಟಕದಲ್ಲಿ ಜುಲೈ 16ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಭಾರತ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಕಾರವಾರ, ಅಂಕೋಲ, ಕುಮ್ಟಾ, ಹೊನ್ನಾವರ, ಭಟ್ಕಳ, ಶಿರ್ಸಿ, ಸಿದ್ಧಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೊಯಿಡಾ ತಾಲೂಕುಗಳಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿತ್ತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 16ರ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದುದರಿಂದ ಅದು ರೆಡ್ ಅಲರ್ಟ್ ಘೋಷಿಸಿದೆ. ಜುಲೈ 16ರ ವರೆಗೆ ಕರಾವಳಿ ಕರ್ನಾಟಕ, ಮಲೆನಾಡು ಜಿಲ್ಲೆಗಳಲ್ಲಿ ಹಾಗೂ ಕರ್ನಾಟಕದ ಒಳನಾಡಿನ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.

ಗೋವಾದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಗೋವಾ ಶಿಕ್ಷಣ ಇಲಾಖೆ 12ನೇ ತರಗತಿ ವರೆಗಿನ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿದೆ. ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ನಡುವೆ ಭಾರತದ ಹವಾಮಾನ ಇಲಾಖೆ ಗೋವಾದಲ್ಲಿ ಸೋಮವಾರ ರೆಡ್ ಅಲರ್ಟ್ ಘೋಷಿಸಿದೆ.

ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಭಾರತದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ದಿಲ್ಲಿಯ ಹಲವು ಭಾಗಗಳಲ್ಲಿ ಕೂಡ ಸೋಮವಾರ ಬೆಳಗ್ಗೆ ಧಾರಾಕಾರ ಮಳೆ ಸುರಿದಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News