ಹಿಮಾಚಲ ಪ್ರದೇಶ: ರಾಜ್ಯಸಭಾ ಚುನಾವಣಾ ಫಲಿತಾಂಶದ ನಂತರ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ಬಿಜೆಪಿ
ಹೊಸದಿಲ್ಲಿ: ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಸುಖ್ವಿಂದರ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಬಹುಮತ ಸಾಬೀತು ಪಡಿಸುವಂತೆ ಸೂಚನೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಹಾಗೂ ಇನ್ನಿತರ ಬಿಜೆಪಿ ಶಾಸಕರು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿದರು.
ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಮರು ದಿನ ಈ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ ಪರಿಣಾಮ ಹಾಗೂ ಹಲವಾರು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವಂತಾಗಿತ್ತು.
"ನಮಗೆ ಅವಕಾಶ ಕ್ಷೀಣವಾಗಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವನ್ನು ನಾವು ನಮ್ಮ ಕಡೆ ಸೆಳೆದುಕೊಂಡಿದ್ದೇವೆ. ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಸದ್ಯ, ಕಾಂಗ್ರೆಸ್ ಸರಕಾರವು ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದೆ" ಎಂದು ರಾಜ್ಯಪಾಲ ಶಿವ್ ಪ್ರತಾಪ್ ಶುಕ್ಲಾರ ಜೊತೆಗೆ ನಡೆದ ಮಾತುಕತೆಯಲ್ಲಿ ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಪ್ರತಿಪಾದಿಸಿದ್ದಾರೆ.
ಇಂದು ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನ ಪ್ರಾರಂಭಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಬಿಜೆಪಿಯು ಅವಿಶ್ವಾಸ ನಿರ್ಣಯ ಮಂಡಿಸಬಹುದು ಎಂಬ ವದಂತಿಗಳು ಹರಡಿರುವ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ.