ದಿಲ್ಲಿ ಅಬಕಾರಿ ನೀತಿ ಪ್ರಕರಣ | ಮನೀಷ್ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ಹೊಸದಿಲ್ಲಿ : ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಒಪ್ಪಿಕೊಂಡಿದೆ.
ಮನೀಷ್ ಸಿಸೋಡಿಯಾ ಅವರು ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಮೂವರು ಸದಸ್ಯರ ಪೀಠ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ನೋಟಿಸು ಜಾರಿ ಮಾಡಿದೆ ಹಾಗೂ ಈ ಬಗ್ಗೆ ಪತಿಕ್ರಿಯೆ ನೀಡುವಂತೆ ಸೂಚಿಸಿದೆ.
ನ್ಯಾಯಮೂರ್ತಿ ಸಂಜೀವ್ ಕುಮಾರ್ ಅವರು ಈ ಪ್ರಕರಣದ ವಿಚಾರಣೆಯಿಂದ ಕಳೆದ ವಾರ ಹಿಂದೆ ಸರಿದ ಬಳಿಕ ಮುಖ್ಯ ನ್ಯಾಯಮೂರ್ತಿ ಹೊಸ ಪೀಠವನ್ನು ರಚಿಸಿದ್ದರು.
ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಕೆ.ವಿ. ವಿಶ್ವನಾಥನ್ ಅವರನ್ನು ಒಳಗೊಂಡ ಈ ಮೂವರು ಸದಸ್ಯರ ಪೀಠ ಮನೀಷ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿತು.
ಮನೀಷ್ ಸಿಸೋಡಿಯಾ ಅವರ ಸಲ್ಲಿಸಿದ ಜಾಮೀನು ಅರ್ಜಿ ಕುರಿತಂತೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೋರಿರುವ ಪೀಠ, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 29ಕ್ಕೆ ನಿಗದಿಪಡಿಸಿದೆ.