ಬೈಬಲ್ ವಿತರಿಸುವುದು ‘ಮತಾಂತರಕ್ಕೆ ಆಮಿಷವಲ್ಲ’: ಅಲಹಾಬಾದ್ ಉಚ್ಚ ನ್ಯಾಯಾಲಯ
ಲಕ್ನೊ: ಬೈಬಲ್ ವಿತರಿಸುವುದು ಹಾಗೂ ಉತ್ತಮ ಬೋಧನೆಗಳನ್ನು ನೀಡುವುದು ಉತ್ತರಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ‘‘ಮತಾಂತರಕ್ಕೆ ಆಮಿಷ’’ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಉಚ್ಚ ನ್ಯಾಯಾಲಯ ಬುಧವಾರ ಹೇಳಿದೆ.
ಮತಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದ ಇಬ್ಬರು ವ್ಯಕ್ತಿಗಳಿಗೆ ಜಾಮೀನು ಮಂಜೂರು ಮಾಡಿದ ಸಂದರ್ಭ ನ್ಯಾಯಮೂರ್ತಿ ಶಮೀಮ್ ಅಹ್ಮದ್ ಈ ಅಭಿಪ್ರಾಯ ವ್ಯಕ್ತಪಡಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರಿಗೆ ಆಮಿಷ ಒಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಬಿಜೆಪಿ ಪದಾಧಿಕಾರಿಯೊಬ್ಬರು ದೂರು ದಾಖಲಿಸಿದ ಬಳಿಕ ಈ ವರ್ಷ ಆರಂಭದಲ್ಲಿ ಜೋಸ್ ಪಾಪಚ್ಚನ್ ಹಾಗೂ ಶೀಜಾ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು.
ಜಾಮೀನು ಅರ್ಜಿಯನ್ನು ಜಿಲ್ಲೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ತಿರಸ್ಕರಿಸಿದ ಬಳಿಕ ಅವರು ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು. ಪಾಪಚ್ಚನ್ ಹಾಗೂ ಶೀಜಾ ಅಮಾಯಕರು. ರಾಜಕೀಯ ದ್ವೇಷದ ಕಾರಣಕ್ಕೆ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಗಳ ಪರ ವಕೀಲರು ತಿಳಿಸಿದ್ದಾರೆ.