ಶವ ಪರೀಕ್ಷೆ ಸಂದರ್ಭ ಕಣ್ಣು ಕಿತ್ತ ವೈದ್ಯರು: ಮೃತಪಟ್ಟ ಮಹಿಳೆಯ ಕುಟುಂಬದ ಆರೋಪ
ಲಕ್ನೊ: ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆಯ ಮರಣೋತ್ತರ ಪರೀಕ್ಷೆ ಸಂದರ್ಭ ಉತ್ತರಪ್ರದೇಶ ಜಿಲ್ಲೆಯ ಸರಕಾರಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಕಣ್ಣುಗಳನ್ನು ತೆಗೆದಿದ್ದಾರೆ ಎಂದು ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಈ ಆರೋಪವನ್ನು ಗಣನೆಗೆ ತೆಗೆದುಕೊಂಡಿರುವ ಜಿಲ್ಲಾ ದಂಡಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ ಹಾಗೂ ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸುವಂತೆ ನಿರ್ದೇಶಿಸಿದ್ದಾರೆ.
ಜಿಲ್ಲೆಯ ಮುಜುರಿಯಾ ಪ್ರದೇಶದ ರಸೂಲಾ ಗ್ರಾಮದಲ್ಲಿ ವರದಕ್ಷಿಣೆಗಾಗಿ ಪೂಜಾ (20) ಅವರನ್ನು ಹತ್ಯೆಗೈಯಲಾಗಿದೆ ಎಂದು ಆರೋಪಿಸಲಾಗಿತ್ತು. ಆಕೆಯ ಮೃತದೇಹ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ರವಿವಾರ ಪತ್ತೆಯಾಗಿತ್ತು.
ಮೃತದೇಹವನ್ನು ಸೋಮವಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಮೃತದೇಹವನ್ನು ಕುಟುಂಬದ ಸದಸ್ಯರಿಗೆ ಹಿಂದಿರುಗಿಸುವ ಸಂದರ್ಭ ಕಣ್ಣುಗಳನ್ನು ಕೀಳಲಾಗಿದೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.
ಅನಂತರ ಕುಟುಂಬದ ಸದಸ್ಯರು ಜಿಲ್ಲಾ ದಂಡಾಧಿಕಾರಿ ಮನೋಜ್ ಕುಮಾರ್ ಅವರನ್ನು ಸಂಪರ್ಕಿಸಿದ್ದಾರೆ ಹಾಗೂ ಕೃತ್ಯ ಎಸಗಿದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಅವರು ಅಂಗಾಂಗ ಸಾಗಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
‘‘ಸಂತ್ರಸ್ತೆಯ ಕುಟುಂಬದ ಸದಸ್ಯರು ನನ್ನನ್ನು ಭೇಟಿಯಾಗಿದ್ದಾರೆ ಹಾಗೂ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ. ತನಿಖೆಗೆ ಆದೇಶಿಸಲಾಗಿದೆ. ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಯಾರೇ ತಪ್ಪೆಸಗಿದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’’ ಎಂದು ಕುಮಾರ್ ಹೇಳಿದ್ದಾರೆ.
ಎರಡನೇ ಮರಣೋತ್ತರ ಪರೀಕ್ಷೆಯನ್ನು ವೀಡಿಯೊ ರೆಕಾರ್ಡ್ ಮಾಡುವಂತೆ ಹಾಗೂ ಅದರ ವರದಿಯನ್ನು ಸಲ್ಲಿಸುವಂತೆ ಜಿಲ್ಲಾ ದಂಡಾಧಿಕಾರಿ ಅವರು ಆದೇಶಿಸಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಪ್ರದೀಪ್ ವರ್ಶ್ನೆ ತಿಳಿಸಿದ್ದಾರೆ.