ಮಹಾರಾಷ್ಟ್ರದ ಮುಖ್ಯಮಂತ್ರಿ ಯಾರಾಗಲಿದ್ದಾರೆ?; ಅಮಿತ್ ಶಾ ಜೊತೆ ಮಹಾಯುತಿ ನಾಯಕರ ಮಾತುಕತೆ
ಮುಂಬೈ: ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಆಯ್ಕೆ ಕಸರತ್ತು ಮುಂದುವರಿದಿದೆ. ಮಹಾಯುತಿ ಮೈತ್ರಿಕೂಟದ ಪ್ರಮುಖ ನಾಯಕರಾದ ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದು, ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಶೀಘ್ರವೇ ತೆರೆ ಬೀಳಲಿದೆ.
ಬಿಜೆಪಿಯ ನಿರ್ಧಾರ ಒಪ್ಪಿಕೊಳ್ಳಲು ಏಕನಾಥ್ ಶಿಂಧೆ ಮುಂದಾದ ಒಂದು ದಿನದ ನಂತರ ಉನ್ನತ ಮಟ್ಟದ ಸಭೆ ನಡೆದಿದೆ. ಪ್ರಧಾನಿ ಮೋದಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ.
ಮೂಲಗಳ ಪ್ರಕಾರ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಮತ್ತು ಶಿವಸೇನೆ ಮತ್ತು ಎನ್ ಸಿಪಿಗೆ ಉಪಮುಖ್ಯಮಂತ್ರಿ ಸ್ಥಾನ ಸಿಗಲಿದೆ. ಫಡ್ನವೀಸ್ ಸಿಎಂ ಆಗಿ ದೃಢಪಟ್ಟರೆ, ಏಕನಾಥ್ ಶಿಂಧೆ ಯಾವ ಪಾತ್ರವನ್ನು ನಿರ್ವಹಿಸುತ್ತಾರೆ ಎಂಬ ಬಗ್ಗೆ ಪ್ರಶ್ನೆ ಮೂಡಿದೆ. ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಬಹುದು ಅಥವಾ ಕೇಂದ್ರ ಸರಕಾರದಲ್ಲಿ ಅವರಿಗೆ ಪ್ರಮುಖ ಹುದ್ದೆಯನ್ನು ನೀಡಬಹುದು ಎಂದು ಹೇಳಲಾಗಿದೆ.
ಅಮಿತ್ ಶಾ ಜೊತೆ ಮಾತುಕತೆ ವೇಳೆ ಮಹಾರಾಷ್ಟ್ರದ ಉಸ್ತುವಾರಿ ಮುಖ್ಯಮಂತ್ರಿ ಏಕನಾಥ್ ಶಿಂದೆ, ಎನ್ಸಿಪಿ ನಾಯಕ ಅಜಿತ್ ಪವಾರ್, ಪ್ರಪುಲ್ಲ ಪಟೇಲ್, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಹಾಜರಿದ್ದರು. ಇಂದು ಮುಂಬೈನಲ್ಲಿ ಮಹಾಯುತಿ ಕೂಟದ ಸಭೆ ನಡೆಯಲಿದ್ದು ಈ ಸಭೆಯಲ್ಲಿ ಮಹಾಯುತಿ ಮೈತ್ರಿಕೂಟದ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ.