ಕೇರಳ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಟಿ.ಎಚ್. ಮುಸ್ತಫಾ ನಿಧನ

Update: 2024-01-14 08:45 GMT

ಟಿ.ಎಚ್. ಮುಸ್ತಫಾ (Photo credit:PC: thefourthnews.in)

ಕೊಚ್ಚಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಟಿ.ಎಚ್.ಮುಸ್ತಫಾ ಅವರು ರವಿವಾರ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ತಮ್ಮ ಪತ್ನಿ ಹಾಗೂ ಎಂಟು ಮಕ್ಕಳನ್ನು ಅಗಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆ.ಕರುಣಾಕರನ್ ಸಚಿವ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಮುಸ್ತಫಾ, ಐದು ಬಾರಿ ಶಾಸಕರೂ ಆಗಿದ್ದರು. ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ರವಿವಾರ ಬೆಳಗ್ಗೆ 5.43ಕ್ಕೆ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮುಸ್ತಫಾರ ನಿಧನಕ್ಕೆ ಪಕ್ಷಾತೀತವಾಗಿ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮುಸ್ತಫಾ ಓರ್ವ ಸಚಿವರಾಗಿ, ಶಾಸಕರಾಗಿ ಹಾಗೂ ಕಾಂಗ್ರೆಸ್ ನಾಯಕರಾಗಿ ತಮ್ಮ ಗುರುತನ್ನು ಬಿಟ್ಟು ಹೋಗಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಣ್ಣಿಸಿದ್ದಾರೆ. ಮುಸ್ತಫಾ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಿದ್ದರು ಹಾಗೂ ಎರ್ನಾಕುಲಂ ಜಿಲ್ಲೆಯಲ್ಲಿ ಪಕ್ಷವನ್ನು ಉತ್ತಮವಾಗಿ ಮುನ್ನಡೆಸಿದ್ದರು ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಹೇಳಿದ್ದಾರೆ.

ಮುಸ್ತಫಾರ ಅಗಲಿಕೆಯಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಕೆ.ಸುಧಾಕರನ್ ಕಂಬನಿ ಮಿಡಿದಿದ್ದಾರೆ.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡಾ ಮುಸ್ತಫಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷವು ಬಲಿಷ್ಠ ನಾಯಕನೊಬ್ಬನನ್ನು ಕಳೆದುಕೊಂಡಿದೆ ಎಂದು ವಿಷಾದಿಸಿದ್ದಾರೆ.

ಮುಸ್ತಫಾ ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಸಮಿತಿಗೆ 14 ವರ್ಷಗಳ ಕಾಲ ಅಧ್ಯಕ್ಷರಾಗಿದ್ದರು ಹಾಗೂ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News