ಜಿಎಸ್‌ಟಿ ವಂಚನೆ ಪ್ರಕರಣ: ಗುಜರಾತ್‌ನಲ್ಲಿ ಈಡಿ ದಾಳಿ

Update: 2024-10-17 13:11 GMT

ಅಹಮದಾಬಾದ್: ಜಿಎಸ್‌ಟಿ ವಂಚನೆಗೆ ಸಂಬಂಧಿಸಿದಂತೆ ಓರ್ವ ಹಿರಿಯ ಪತ್ರಕರ್ತ ಸೇರಿದಂತೆ ಎಂಟು ಮಂದಿಯನ್ನು ಗುಜರಾತ್ ಪೊಲೀಸರು ಬಂಧಿಸಿದ ಬೆನ್ನಿಗೇ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿರುವ ಜಾರಿ ನಿರ್ದೇಶನಾಲಯ, ಗುರುವಾರ ಗುಜರಾತ್‌ನ ವಿವಿಧ ನಗರಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡ ನಂತರ ಗುಜರಾತ್‌ನ ರಾಜ್‌ಕೋಟ್, ಜುನಾಗಢ, ಅಹಮದಾಬಾದ್, ಭಾವ್‌ನಗರ ಹಾಗೂ ವೆರಾವಲ್‌ನ 23 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.‌ ಈ ಸಂದರ್ಭದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ಪತ್ರಕರ್ತರೊಬ್ಬರಿಗೆ ಸೇರಿದ ಸ್ಥಳದ ಮೇಲೂ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.

ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರು ದಾಖಲಿಸಿಕೊಂಡಿರುವ ಎಫ್‌ಐಆರ್ ಆಧರಿಸಿ ಈ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ.

ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ಸ್ ಹಾಗೂ ವಂಚಕ ವಹಿವಾಟುಗಳ ಮೂಲಕ ಸರಕಾರಕ್ಕೆ ವಂಚನೆ ಎಸಗುವುದರಲ್ಲಿ ಭಾಗಿಯಾಗಿರುವ ಶೆಲ್ ಕಂಪನಿಗಳು ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಜಿಎಸ್‌ಟಿ ಸಲ್ಲಿಸಿದ್ದ ದೂರನ್ನು ಆಧರಿಸಿ ಅಹಮದಾಬಾದ್ ನಗರ ಅಪರಾಧ ವಿಭಾಗದ ಪೊಲೀಸರು ಹಲವು ವ್ಯಕ್ತಿಗಳು ಹಾಗೂ ಸಂಸ್ಥೆಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News