ಗುಜರಾತ್: ಸಿಐಎಸ್‌ಎಫ್ ಯೋಧ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಸೂರತ್ : ಸೂರತ್ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಯೋಜಿತರಾಗಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ ಯೋಧ ಶನಿವಾರ ತನ್ನ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆ ಸೂರತ್ ವಿಮಾನ ನಿಲ್ದಾಣದ ವಾಶ್‌ರೂಮ್‌ನಲ್ಲಿ ಅಪರಾಹ್ನ ಸುಮಾರು 2.10ಕ್ಕೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಯೋಧನನ್ನು ಜೈಪುರದ ಕಿಶನ್ ಸಿಂಗ್ (32) ಎಂದು ಗುರುತಿಸಲಾಗಿದೆ. ಕಿಶನ್ ಸಿಂಗ್ ಅವರನ್ನು ಸಿಐಎಸ್‌ಎಫ್‌ನ ಕರ್ತವ್ಯದ ಭಾಗವಾಗಿ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾಗಿತ್ತು.
ಕಿಶನ್ ಸಿಂಗ್ ತನ್ನ ಸೇವಾ ರಿವಾಲ್ವರ್‌ನಿಂದ ಹೊಟ್ಟೆಗೆ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ‘‘ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು’’ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಎನ್.ವಿ. ಭಾರದ್ವಾಜ್ ತಿಳಿಸಿದ್ದಾರೆ.
ಕಿಶನ್ ಸಿಂಗ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇದುವರೆಗೆ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.