ನಾನೂ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2025-01-06 12:15 GMT

 ಡಿ.ಕೆ.ಶಿವಕುಮಾರ್ 

ಹೊಸದಿಲ್ಲಿ : ʼನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ದಿಲ್ಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ” ಎಂದರು.

ʼಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ?ʼ ಎಂದು ಅವರು ಪ್ರಶ್ನಿಸಿದರು.

ಸಂಪುಟ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಮಾತುಗಳು ಕೇಳಿಬರುತ್ತಿವೆ ಎಂದಾಗ, “ಯಾವ ಚರ್ಚೆಯೂ ನಡೆದಿಲ್ಲ. ಮಾಧ್ಯಮದವರಿಗೆ ಯಾರೋ ತಪ್ಪು ಮಾಹಿತಿ ನೀಡಿ, ನಿಮಗೆ ಬಿಡುವು ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಮಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಇದರ ಬಗ್ಗೆ ಮಾತನಾಡುತ್ತಾರೆ” ಎಂದರು.

ರಾಜ್ಯದಲ್ಲಿ ಎಂಟು ತಿಂಗಳ ಮಗುವಿನಲ್ಲಿ ಎಚ್ ಎಂವಿ ವೈರಸ್ ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ʼಈಗಾಗಲೇ ನಮ್ಮ ಆರೋಗ್ಯ ಸಚಿವರು ಕೆಲಸ ಮಾಡುತ್ತಿದ್ದಾರೆ. ಯಾರೂ ಸಹ ಆತಂಕಪಡುವ ಅವಶ್ಯಕತೆಯಿಲ್ಲ. ಸರ್ಕಾರ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದೆʼ ಎಂದು ಹೇಳಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News