ನಮ್ಮದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಎಂಬ ಕಲ್ಪನೆ ಸುಳ್ಳು: ರಾಹುಲ್ ಗಾಂಧಿ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಹುಲ್ ಗಾಂಧಿ ಖಂಡಿಸಿದ್ದಾರೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಜೊತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಪ್ರಜಾಪ್ರಭುತ್ವದ ಚೌಕಟ್ಟನ್ನು ರಕ್ಷಿಸಬೇಕಾದ ಸಂಸ್ಥೆಗಳು ದೇಶದಲ್ಲಿವೆ, ಆದರೆ ಕಾಂಗ್ರೆಸ್ ಪಕ್ಷದ ವಿರುದ್ಧದ ಈ ಕ್ರಿಮಿನಲ್ ಕ್ರಮದ ಬಗ್ಗೆ ಅವು ಏನನ್ನೂ ಹೇಳುತ್ತಿಲ್ಲ ಎಂದಿದ್ದಾರೆ.
ʼನಿಮ್ಮ ಸಂಪೂರ್ಣ ಹಣಕಾಸಿನ ಗುರುತನ್ನು ಅಳಿಸಿದಾಗ ಏನಾಗುತ್ತದೆ? ಕಾಂಗ್ರೆಸ್ ಗೆ ಮಾಡಿದ್ದು ಇದನ್ನೇ. ನಾವು ನಮ್ಮ ಕಾರ್ಯಕರ್ತರನ್ನು ಬೆಂಬಲಿಸಲು ಸಾಧ್ಯವಾಗುತ್ತಿಲ್ಲ, ನಾವು ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಲು ಸಾಧ್ಯವಿಲ್ಲ, ನಮ್ಮ ನಾಯಕರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ರೈಲಿನಲ್ಲಿ ಹೋಗಲು ಸಾಧ್ಯವಾಗುತ್ತಿಲ್ಲ. ಚುನಾವಣೆ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಲಾಗಿದೆʼ ಎಂದು ಅವರು ಹೇಳಿದ್ದಾರೆ.
ಇದು ಕಾಂಗ್ರೆಸ್ ನ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವುದಲ್ಲ, ಬದಲಾಗಿ ಭಾರತೀಯ ಪ್ರಜಾಪ್ರಭುತ್ವವನ್ನು ಫ್ರೀಝ್ ಮಾಡಲಾಗಿದೆ ಎಂದು ರಾಹುಲ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಪ್ರಧಾನಿಯವರು ವ್ಯವಸ್ಥಿತ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದು, ಪಕ್ಷದ ಹಣವನ್ನು ಬಿಡುಗಡೆ ಮಾಡುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಕೋರಿದರು.