ಅಬಕಾರಿ ನೀತಿ ಪ್ರಕರಣ | ದಿಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ತಮಗೆ ಮಂಜೂರು ಮಾಡಿದ್ದ ಜಾಮೀನನ್ನು ತಡೆ ಹಿಡಿದಿರುವ ದಿಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರವಿವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ವಿಷಯದ ಕುರಿತು ತುರ್ತು ವಿಚಾರಣೆ ನಡೆಸಬೇಕು ಎಂದು ಕೇಜ್ರಿವಾಲ್ ಪರ ವಕೀಲರು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೂನ್ 20ರಂದು ವಿಚಾರಣಾ ನ್ಯಾಯಾಲಯವು ಅರವಿಂದ್ ಕೇಜ್ರಿವಾಲ್ ಅವರಿಗೆ ಮಂಜೂರು ಮಾಡಿದ್ದ ಜಾಮೀನನ್ನು ಜೂನ್ 21ರಂದು ದಿಲ್ಲಿ ಹೈಕೋರ್ಟ್ ಎರಡು-ಮೂರು ದಿನಗಳ ಕಾಲ ತಡೆ ಹಿಡಿದಿತ್ತು. ಜಾಮೀನು ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಜಾರಿ ನಿರ್ದೇಶನಾಲಯ(ಈಡಿ) ಸಲ್ಲಿಸಿರುವ ಅರ್ಜಿ ವಿಚಾರಣೆ ಕುರಿತ ಆದೇಶವನ್ನು ಕಾಯ್ದಿರಿಸಿರುವುದಾಗಿ ನ್ಯಾಯಾಲಯವು ಹೇಳಿತ್ತು.
ಇದರೊಂದಿಗೆ, ಕೇಜ್ರಿವಾಲ್ ಗೆ ವಿಚಾರಣಾ ನ್ಯಾಯಾಲಯದಿಂದ ಮಂಜೂರಾಗಿದ್ದ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಈಡಿ)ವು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಗೆ ನೋಟಿಸ್ ಜಾರಿಗೊಳಿಸಿದ್ದ ನ್ಯಾಯಾಲಯವು, ಈ ಅರ್ಜಿಯನ್ನು ಜುಲೈ 10ರಂದು ವಿಚಾರಣೆಗೆ ಪಟ್ಟಿ ಮಾಡಿತ್ತು.
ಜೂನ್ 20ರಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದ್ದ ರೌಸ್ ಅವೆನ್ಯೂ ಕೋರ್ಟ್ ನ ನ್ಯಾ. ನಿಯಾಯ್ ಬಿಂದು, ಜಾಮೀನನ್ನು ಇನ್ನೆರಡು ದಿನಗಳ ಕಾಲ ತಡೆ ಹಿಡಿಯಬೇಕು ಎಂಬ ಜಾರಿ ನಿರ್ದೇಶನಾಲಯ(ಈಡಿ)ದ ಮನವಿಯನ್ನು ತಳ್ಳಿ ಹಾಕಿದ್ದರು. ಹೀಗಾಗಿ ಜಾರಿ ನಿರ್ದೇಶನಾಲಯ(ಈಡಿ)ವು ಹೈಕೋರ್ಟ್ ಮೆಟ್ಟಿಲೇರಿತ್ತು.