ಸಂಸತ್ತಿನಲ್ಲಿ ಮುಂದುವರಿದ ಗದ್ದಲ: ಲೋಕಸಭಾ ಕಲಾಪ ಅನಿರ್ದಿಷ್ಟಾವಧಿ ಕಾಲ ಮುಂದೂಡಿಕೆ
Update: 2024-12-20 06:28 GMT
ಹೊಸದಿಲ್ಲಿ: ಲೋಕಸಭೆಯಲ್ಲಿ ಶುಕ್ರವಾರ ಕೂಡಾ ಗದ್ದಲದ ವಾತಾವರಣ ಮುಂದುವರಿದ ಕಾರಣ, ಲೋಕಸಭಾ ಕಲಾಪವನ್ನು ಅನಿರ್ದಿಷ್ಟಾವಧಿ ಕಾಲ ಮುಂದೂಡಲಾಯಿತು.
ಲೋಕಸಭಾ ಕಲಾಪವನ್ನು ಮುಂದೂಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಉಪಸ್ಥಿತರಿದ್ದರು.
ಡಾ. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಇಂಡಿಯಾ ಮೈತ್ರಿಕೂಟದ ಸದಸ್ಯರು ಪ್ರತಿಭಟಿಸುತ್ತಿರುವ ಬೆನ್ನಿಗೇ ಈ ಬೆಳವಣಿಗೆ ನಡೆದಿದೆ. ಆದರೆ, ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದಿರುವ ಅಮಿತ್ ಶಾ, ಕಾಂಗ್ರೆಸ್ ಚಿಲ್ಲರೆ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಂಸತ್ತಿನ ಆವರಣದಲ್ಲಿ ಗುರುವಾರ ನಡೆದ ರಾಜಕೀಯ ಪ್ರತಿಭಟನೆಯ ಸಂದರ್ಭದಲ್ಲಿ ಸಂಭವಿಸಿದ ಘರ್ಷಣೆಯ ಹಿನ್ನೆಲೆಯಲ್ಲಿ, ಯಾವುದೇ ರಾಜಕೀಯ ಪಕ್ಷಗಳು ಅಥವಾ ಸಂಸದರು ಸಂಸತ್ ಭವನದ ದ್ವಾರದೆದುರು ಪ್ರತಿಭಟನೆ ನಡೆಸುವುದನ್ನು ನಿಷೇಧಿಸಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರುವಾರ ಆದೇಶ ಹೊರಡಿಸಿದ್ದರು.