ಲೋಕಸಭೆ ಚುನಾವಣೆ ದೊಡ್ಡ ಸವಾಲು: ಸಚಿವ ಝಮೀರ್ ಅಹ್ಮದ್

Update: 2024-01-06 14:46 GMT

ಹೊಸದಿಲ್ಲಿ: ಲೋಕಸಭೆ ಚುನಾವಣೆ ನಮಗೆಲ್ಲ ಅತಿ ದೊಡ್ಡ ಸವಾಲಾಗಿದ್ದು ದೇಶದ ಹಿತಾಸಕ್ತಿಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಶನಿವಾರ ಹೊಸದಿಲ್ಲಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಜನತೆಯ ಒಳಿತಿಗಾಗಿ ಶ್ರಮಿಸುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಹೇಳಿದರು.

ಲೋಕಸಭೆ ಚುನಾವಣೆ ಒಂದು ರೀತಿಯಲ್ಲಿ ಅಗ್ನಿ ಪರೀಕ್ಷೆ ಆಗಿದ್ದು ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರ ಹಿಡಿಯುವುದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಹೊಣೆಗಾರಿಕೆ ಮಾತ್ರವಲ್ಲ ನಮ್ಮೆಲ್ಲರ ಜವಾಬ್ದಾರಿ ಎಂದು ಅವರು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಸಮುದಾಯದ ಜತೆ ಅಲ್ಪಸಂಖ್ಯಾತ ಸಮುದಾಯ ಒಟ್ಟಾಗಿ ಕಾಂಗ್ರೆಸ್ ಬೆಂಬಲಿಸಿತು. ಅಲ್ಲಿ ಅಧಿಕಾರಕ್ಕೆ ಬಂದ ನಂತರ ತೆಲಂಗಾಣದಲ್ಲೂ ಬದಲಾವಣೆ ಗಾಳಿ ಬೀಸಿತು. ಇದೀಗ ಇಡೀ ರಾಷ್ಟ್ರ ದಲ್ಲಿ ಬದಲಾವಣೆ ತರಬೇಕಿದೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಮೂಲತಃ ನಾನು ಜೆಡಿಎಸ್‍ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದೆ. ಇಲ್ಲಿಗೆ ಬಂದ ನಂತರ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತ ಸಮುದಾಯಕ್ಕೆ ಎಷ್ಟು ದೊಡ್ಡ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ ಎಂಬುದು ಅರ್ಥವಾಯಿತು. ಸಮುದಾಯವು ಅಷ್ಟೇ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಜತೆ ನಿಂತಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಒಟ್ಟಾಗಿ ಹೋರಾಟ ಮಾಡೋಣ ಎಂದು ಅವರು ಕರೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News