ಮಹಾರಾಷ್ಟ್ರ ವಿಧಾನಸಭಾ ಚುನಾವಣೆ | ಎಂವಿಎ ಸೀಟು ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಂಜಯ್ ರಾವತ್
ಮುಂಬೈ: ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಶುಕ್ರವಾರ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಡುವಿನ ಸೀಟು ಹಂಚಿಕೆ ಮಾತುಕತೆಯಲ್ಲಿನ ವಿಳಂಬದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಎಂವಿಎ ಮೈತ್ರಿಕೂಟದ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ ಪವಾರ್ ಎನ್‌ಸಿಪಿ (ಎಸ್‌ಪಿ) ಪಕ್ಷಗಳು ಸೀಟು ಹಂಚಿಕೆ ವಿಚಾರದಲ್ಲಿ 288 ವಿಧಾನಸಭಾ ಕ್ಷೇತ್ರಗಳ ಪೈಕಿ 200 ಸ್ಥಾನಗಳಲ್ಲಿ ಒಮ್ಮತದ ನಿರ್ಧಾರಕ್ಕೆ ತಲುಪಿವೆ ಎಂದರು.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ಮುಕುಲ್ ವಾಸ್ನಿಕ್ ಮತ್ತು ಪಕ್ಷದ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರೊಡನೆ ಶುಕ್ರವಾರ ಬೆಳಿಗ್ಗೆ ಸೀಟು ಹಂಚಿಕೆ ಕುರಿತು ಮಾತನಾಡಿದ್ದೇನೆ. ಕಾಂಗ್ರೆಸ್‌ನ ಉನ್ನತ ನಾಯಕ ರಾಹುಲ್ ಗಾಂಧಿಯವರೊಂದಿಗೂ ಈ ಕುರಿತು ಮಾತನಾಡುತ್ತೇನೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಬಾಕಿ ಇರುವ ಸೀಟು ಹಂಚಿಕೆಯಲ್ಲಿನ ನಿರ್ಧಾರವನ್ನು ತ್ವರಿತಗೊಳಿಸಬೇಕು. ಬಹಳ ಕಡಿಮೆ ಸಮಯ ಉಳಿದಿದೆ. ಮಹಾರಾಷ್ಟ್ರ ಕಾಂಗ್ರೆಸ್ ನಾಯಕರಿಗೆ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಇಲ್ಲ. ಅವರು ಪಟ್ಟಿಯನ್ನು ಆಗಾಗ ದೆಹಲಿಗೆ ಕಳುಹಿಸಬೇಕು. ಅಲ್ಲಿಯೂ ಚರ್ಚೆಗಳು ನಡೆಯುತ್ತವೆ. ನಿರ್ಧಾರವನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕು ಎಂದು ರಾವತ್ ಅಭಿಪ್ರಾಯಪಟ್ಟರು.