ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಸಿಬಿಐಯಿಂದ ತನಿಖೆ ಆರಂಭ
Update: 2023-07-29 15:26 GMT
ಇಂಫಾಲ್: ಮಣಿಪುರದಲ್ಲಿ ಮೇ 4ರಂದು ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ಶನಿವಾರ ಕೈಗೆತ್ತಿಕೊಂಡಿದೆ.
ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿರುವುದನ್ನು ದಾಖಲಿಸಲಾದ ವೀಡಿಯೊ ಜುಲೈ 19ರಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ವೀಡಿಯೊದಲ್ಲಿ ಗುಂಪೊಂದು ಅಸಹಾಯಕ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವುದು, ಮಹಿಳೆಯರು ಅಳುತ್ತಾ ತಮ್ಮನ್ನು ಬಿಟ್ಟು ಬಿಡುವಂತೆ ಬೇಡಿಕೊಳ್ಳುತ್ತಿರುವುದು ದಾಖಲಾಗಿದೆ.
ಕೇಂದ್ರ ಗೃಹ ಸಚಿವಾಲಯದ ಶಿಫಾರಸಿನಂತೆ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ 6 ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ರಾಜ್ಯ ಸರಕಾರ ಈಗಾಗಲೇ ನಿರ್ಧರಿಸಿದೆ.