ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಪ್ರಾಕೃತಿಕ ವಿಕೋಪ ಪರಿಹಾರ ಬಿಡುಗಡೆಗೆ ಕೇಂದ್ರ ಸರಕಾರ ಅನುಮೋದನೆ
Update: 2024-11-26 08:29 GMT
ಹೊಸದಿಲ್ಲಿ: ದೇಶದ ವಿವಿಧ ರಾಜ್ಯಗಳಲ್ಲಿನ ಪ್ರಾಕೃತಿಕ ವಿಕೋಪ ಪರಿಹಾರವಾಗಿ ರೂ. 1,115.67 ಕೋಟಿ ಬಿಡುಗಡೆ ಮಾಡಲು ಮಂಗಳವಾರ ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದಲ್ಲಿ ಪ್ರಾಕೃತಿಕ ವಿಕೋಪವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದನ್ನು ಖಾತರಿ ಪಡಿಸಲು ಕೇಂದ್ರ ಗೃಹ ಸಚಿವಾಲಯವು ಹಲವು ಉಪ್ರಕ್ರಮಗಳನ್ನು ಕೈಗೆತ್ತಿಕೊಂಡಿದೆ.
“ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶಕ್ಕೆ ತಲಾ ರೂ. 139 ಕೋಟಿ, ಎಂಟು ಈಶಾನ್ಯ ರಾಜ್ಯಗಳಿಗೆ ರೂ. 378 ಕೋಟಿ, ಮಹಾರಾಷ್ಟ್ರಕ್ಕೆ ರೂ. 100 ಕೋಟಿ, ಕರ್ನಾಟಕ ಹಾಗೂ ಕೇರಳಕ್ಕೆ ತಲಾ ರೂ. 72 ಕೋಟಿ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳಕ್ಕೆ ತಲಾ ರೂ. 50 ಕೋಟಿ ಪರಿಹಾರ ಬಿಡುಗಡೆ ಮಾಡಲು ಸಮಿತಿಯು ಅನುಮೋದನೆ ನೀಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.