ಲೋಕಸಭೆಯಲ್ಲಿ ವಯನಾಡ್ ಭೂಕುಸಿತವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ
ಹೊಸದಿಲ್ಲಿ: ವಯನಾಡ್ ನಲ್ಲಿ ಸಂಭವಿಸಿರುವ ಭೀಕರ ಭೂ ಕುಸಿತದ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.
ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊವೊಂದನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, “ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ವಯನಾಡ್ ನಲ್ಲಿ ಸಂಭವಿಸಿರುವ ಭಯಾನಕ ಭೂ ಕುಸಿತದ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸಿದರು. ವಯನಾಡ್ ನಿಂದ ಬರುತ್ತಿರುವ ಸುದ್ದಿಗಳು ಹೃದಯವಿದ್ರಾವಕವಾಗಿದೆ” ಎಂದು ಬರೆದುಕೊಂಡಿದ್ದಾರೆ.
“ಈ ಅತ್ಯಗತ್ಯದ ಸಂದರ್ಭದಲ್ಲಿ ವಯನಾಡ್ ಜನತೆಗೆ ನೆರವನ್ನು ಒದಗಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಾವು ಕೇಂದ್ರ ಮತ್ತು ರಾಜ್ಯ ಸರಕಾರಗಳೆರಡನ್ನೂ ಆಗ್ರಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.
ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಎರಡು ಬಾರಿ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ವಯನಾಡ್ ಲೋಕಸಭಾ ಕ್ಷೇತ್ರದೊಂದಿಗೆ ರಾಯ್ ಬರೇಲಿ ಕ್ಷೇತ್ರದಲ್ಲೂ ಗೆಲುವು ಸಾಧಿಸಿದ್ದರು. ಹೀಗಾಗಿ, ಅವರು ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಿ, ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿಯಿಂದ ತೆರವಾಗಿರುವ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.