ಶೇಕ್ ಹಸೀನಾರ ಮುಂದಿನ ಯೋಜನೆಗಳ ಬಗ್ಗೆ ಮಾಹಿತಿಯಿಲ್ಲ: ಭಾರತ
ಹೊಸದಿಲ್ಲಿ : ತಮ್ಮ ಭವಿಷ್ಯದ ಯೋಜನೆಗಳನ್ನು ಮುಂದಕ್ಕೊಯ್ಯುವುದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಕ್ ಹಸೀನಾರಿಗೆ ಬಿಟ್ಟಿದ್ದು, ಈ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಗುರುವಾರ ಹೇಳಿದೆ.
“ಅವರ ಯೋಜನೆಗಳ ಕುರಿತು ಮಾತನಾಡುವುದು ಸೂಕ್ತವಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇದಕ್ಕೂ ಮುನ್ನ, ಗುರುವಾರ ಮಧ್ಯಾಹ್ನ ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, “ಬ್ರಿಟನ್ ನ ವಿದೇಶಾಂಗ ಕಾರ್ಯದರ್ಶಿ ಅವರೊಂದಿಗೆ ಬಾಂಗ್ಲಾದೇಶ ಹಾಗೂ ಪಶ್ಚಿಮ ಏಶ್ಯಾದ ಪರಿಸ್ಥಿತಿ ಕುರಿತು ಮಾತುಕತೆ ನಡೆಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.
ತಮ್ಮ ರಾಜೀನಾಮೆಗೆ ಆಗ್ರಹಿಸಿ ಬಾಂಗ್ಲಾದೇಶಾದ್ಯಂತ ಭಾರಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದ ಬೆನ್ನಿಗೇ ಸೋಮವಾರ ತಮ್ಮ ಸ್ಥಾನವನ್ನು ತೊರೆದಿದ್ದ ಶೇಕ್ ಹಸೀನಾ, ಭಾರತಕ್ಕೆ ಪರಾರಿಯಾಗಿದ್ದರು. ಅಲ್ಲಿಂದೀಚೆಗೆ ಅವರು ಹೊಸದಿಲ್ಲಿಯ ವಾಯು ನೆಲೆಯೊಂದರಲ್ಲಿ ಆಶ್ರಯ ಪಡೆದಿದ್ದಾರೆ.