ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ರಾಜಕೀಯ ಸಲ್ಲದು: ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ

Update: 2024-12-28 07:21 GMT

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ 

ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ಹಾಗೂ ಅಂತ್ಯಕ್ರಿಯೆ ಕುರಿತು ನಡೆಯುತ್ತಿರುವ ವಿವಾದವನ್ನು ಶನಿವಾರ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಖಂಡಿಸಿದ್ದಾರೆ. ಮನಮೋಹನ್ ಸಿಂಗ್ ಕುಟುಂಬ ಹಾಗೂ ಸಿಖ್ ಸಮುದಾಯದ ಭಾವನೆಗಳಿಗೆ ಗೌರವ ನೀಡಬೇಕು ಎಂದೂ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಯಾವತಿ, “ಡಾ. ಮನಮೋಹನ್ ಸಿಂಗ್ ಅವರ ಕುಟುಂಬ ಬಯಸುವ ಸ್ಥಳದಲ್ಲಿ, ಭಾರತದ ಪ್ರಪ್ರಥಮ ಸಿಖ್ ಪ್ರಧಾನಿಯಾದ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಹಾಗೂ ಸ್ಮಾರಕ ನಿರ್ಮಾಣಕ್ಕೆ ಕೇಂದ್ರ ಸರಕಾರ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಹಾಗೂ ಇಂತಹ ವಿಚಾರಗಳಲ್ಲಿ ಕೇಂದ್ರ ಸರಕಾರವು ಅವರ ಕುಟುಂಬ ಹಾಗೂ ಸಿಖ್ ಸಮುದಾಯದ ಭಾವನೆಗಳನ್ನು ಗೌರವಿಸಬೇಕು” ಎಂದೂ ಅವರು ಒತ್ತಾಯಿಸಿದ್ದಾರೆ.

ಡಾ. ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಸ್ಥಳದಲ್ಲೇ ಅವರ ಅಂತ್ಯ ಕ್ರಿಯೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಈ ಕುರಿತು ವಿವಾದ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾವತಿ ಮೇಲಿನಂತೆ ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ, ಉತ್ತರ ದಿಲ್ಲಿಯಲ್ಲಿರುವ ಸಾರ್ವಜನಿಕ ರುದ್ರಭೂಮಿಯಾದ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಡಾ. ಮನಮೋಹನ್ ಸಿಂಗ್ ಅವರ ಸರಕಾರಿ ಪ್ರಾಯೋಜಿತ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಶನಿವಾರ ಕೇಂದ್ರ ಸರಕಾರ ಹೇಳಿತ್ತು. ಅಲ್ಲದೆ, ಇನ್ನೆರಡು ದಿನಗಳಲ್ಲಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ಗುರುತಿಸಲಾಗುವುದು. ಆದರೆ, ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡುವುದಿಲ್ಲ ಎಂದು ತಿಳಿಸಿತ್ತು.

ಕೇಂದ್ರ ಸರಕಾರದ ಈ ನಿಲುವನ್ನು ಖಂಡಿಸಿದ್ದ ಕಾಂಗ್ರೆಸ್, “ಭಾರತದ ಪ್ರಪ್ರಥಮ ಸಿಖ್ ಪ್ರಧಾನಿಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗುತ್ತಿದೆ” ಎಂದು ಆರೋಪಿಸಿತ್ತು.

ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಸುಧಾಂಶು ತ್ರಿವೇದಿ, ಗಾಂಧಿ ಕುಟುಂಬದ ಹೊರತಾಗಿ ಇತರ ನಾಯಕರನ್ನು ಗೌರವಿಸಿದ ಇತಿಹಾಸವೇ ಕಾಂಗ್ರೆಸ್ ಪಕ್ಷಕ್ಕಿಲ್ಲ ಎಂದು ಕಟಕಿಯಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News