‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ದೊರೆಯುವುದು ಅನುಮಾನ: ದಿಗ್ವಿಜಯ್ ಸಿಂಗ್
ಅಗರ್ ಮಾಲ್ವಾ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಸಂಸತ್ತಿನಲ್ಲಿ ಅನುಮೋದನೆ ದೊರೆಯುವುದು ಅನುಮಾನ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಶನಿವಾರ ರಾತ್ರಿ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ದಿಗ್ವಿಜಯ್ ಸಿಂಗ್, ಗುರುವಾರ ಸಂಸತ್ತಿನ ಆವರಣದಲ್ಲಿ ರಾಹುಲ್ ಗಾಂಧಿ ಬಿಜೆಪಿಯ ಸದಸ್ಯರೊಬ್ಬರನ್ನು ತಳ್ಳಿ, ಹಲ್ಲೆ ನಡೆಸಿದರು ಎಂಬ ಆರೋಪಗಳನ್ನೂ ನಿರಾಕರಿಸಿದರು.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಜಂಟಿ ಸದನ ಸಮಿತಿಯನ್ನು ರಚಿಸಲಾಗಿದೆ ಹಾಗೂ ಈ ಮಸೂದೆಗೆ ಅನುಮೋದನೆ ದೊರೆಯುತ್ತದೆ ಎಂದು ನನಗನ್ನಿಸುತ್ತಿಲ್ಲ” ಎಂದು ಹೇಳಿದ್ದಾರೆ.
ದೇಶಾದ್ಯಂತ ಒಂದೇ ಬಾರಿಗೆ ಚುನಾವಣೆ ನಡೆಸಲು ಅನುವಾಗುವಂತೆ ಸಂವಿಧಾನಕ್ಕೆ ಒಂದು ತಿದ್ದುಪಡಿಯೂ ಸೇರಿದಂತೆ ಎರಡು ಮಸೂದೆಗಳನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈ ಕುರಿತು ಲೋಕಸಭೆಯಲ್ಲಿ ಬಿಸಿಬಿಸಿ ಚರ್ಚೆಯೂ ನಡೆದಿತ್ತು.