ತಿರುಮಲ ದೇವಸ್ಥಾನದಲ್ಲಿ ಹಿಂದೂಗಳಿಗೆ ಮಾತ್ರ ಉದ್ಯೋಗ : ಸಿಎಂ ಚಂದ್ರಬಾಬು ನಾಯ್ಡು

Photo | NDTV
ಅಮರಾವತಿ : ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಹಿಂದೂಗಳು ಮಾತ್ರ ಕೆಲಸ ಮಾಡಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಹೇಳಿದರು.
ಮೊಮ್ಮಗ ದೇವಾಂಶ್ ಅವರ ಹುಟ್ಟುಹಬ್ಬದ ಹಿನ್ನೆಲೆ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಚಂದ್ರಬಾಬು ನಾಯ್ಡು, ದೇವಸ್ಥಾನದಲ್ಲಿ ಕ್ರಿಶ್ಚಿಯನ್ನರು ಮತ್ತು ಇತರ ಸಮುದಾಯದ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದರೆ, ಅವರ ಭಾವನೆಗಳಿಗೆ ಧಕ್ಕೆಯಾಗದಂತೆ ಗೌರವಯುತವಾಗಿ ಬೇರೆಡೆಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದರು.
ಹಿಂದೂಗಳು ತಮ್ಮ ಸಂಸ್ಥೆಗಳಲ್ಲಿ ಕೆಲಸ ಮಾಡಬಾರದು ಎಂದು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಂಸ್ಥೆಗಳು ಬಯಸಿದರೆ ಅವರ ಭಾವನೆಗಳನ್ನು ಕೂಡ ಗೌರವಿಸುವ ಕ್ರಮವನ್ನು ಕೈಗೊಳ್ಳಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಹೇಳಿದರು.
ಭಾರತದಾದ್ಯಂತ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ನಿರ್ಮಿಸುವ ಯೋಜನೆಯನ್ನು ಅವರು ಇದೇ ವೇಳೆ ಘೋಷಿಸಿದರು. ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕೆಲಸ ಮಾಡುವವರೆಲ್ಲರೂ ಹಿಂದೂಗಳಾಗಿರಬೇಕು ಎಂದು ಟಿಟಿಡಿ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಈ ಮೊದಲು ಹೇಳಿದ್ದರು.