ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ; ಕನಿಷ್ಠ ಐವರು ಮೃತ್ಯು, ಹಲವರಿಗೆ ಗಾಯ

Photo : PTI
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಗುಂಪಿನ ಶಂಕಿತ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪಹಲ್ಗಾಮ್‌ನ ಬೈಸರನ್ ಕಾಡು ಪ್ರದೇಶದಲ್ಲಿ ಟ್ರಕ್ಕಿಂಗ್ ಹೋಗುತ್ತಿದ್ದ ಮಹಿಳಾ ಪ್ರವಾಸಿಗರೊಬ್ಬರು ಪೊಲೀಸರಿಗೆ ಕರೆ ಮಾಡಿ ಭಯೋತ್ಪಾದಕರಿಂದ ದಾಳಿಯಾಗಿರುವ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಚಾರಣಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ದಾಳಿ ಮಾಡಿದ್ದರು ಎಂದು ಅವರು ಮಾಹಿತಿ ನೀಡಿದ್ದರು. ಇದು, ಸುಮಾರು ಒಂದು ವರ್ಷದ ನಂತರ ನಡೆದ ಅತ್ಯಂತ ಭೀಕರ ದಾಳಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಹಲವಾರು ಪ್ರವಾಸಿಗರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ತಿಳಿದು ಬಂದಿದೆ.
"ನನ್ನ ಪತಿಯ ತಲೆಗೆ ಗುಂಡು ಹಾರಿಸಲಾಗಿದ್ದು, ದಾಳಿಯಲ್ಲಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ" ಎಂದು ಬದುಕುಳಿದ ಮಹಿಳೆಯೊಬ್ಬರು ಪಿಟಿಐ ಸುದ್ದಿ ಸಂಸ್ಥೆಗೆ ಫೋನ್ ಮೂಲಕ ತಿಳಿಸಿದ್ದಾರೆ. ಮಹಿಳೆ ತನ್ನ ಹೆಸರನ್ನು ಹೇಳಲಿಲ್ಲ. ಆದರೆ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಸಹಾಯಕ್ಕಾಗಿ ಮನವಿ ಮಾಡಿಕೊಂಡರು ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.