ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ | PTI
ಹೊಸದಿಲ್ಲಿ: ದೇಶದ ಭದ್ರತೆ ಮತ್ತು ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದು ಪೆಗಾಸಸ್ ಕುರಿತ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು, ತಾಂತ್ರಿಕ ಸಮಿತಿಯ ವರದಿ ಬೀದಿಗಳಲ್ಲಿ ಚರ್ಚೆಗೆ ಗ್ರಾಸವಾಗುವಂತೆ ಮಾಡಬಾರದು. ತಾಂತ್ರಿಕ ಸಮಿತಿಯ ವರದಿಯನ್ನು ಎಷ್ಟು ಪ್ರಮಾಣದಲ್ಲಿ ಹಂಚಿಕೊಳ್ಳಬಹುದು ಎಂಬುದನ್ನು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೇಶದ ಭದ್ರತೆ ಮತ್ತು ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ. ಆದರೆ, ನಾವು ಕೂಡ ಸೇರಿದ್ದೇವೆಯೇ ಎಂದು ತಿಳಿಯಲು ಬಯಸುವವರಿದ್ದರೆ ಅಂತಹವರ ವ್ಯಕ್ತಿಗತ ಆತಂಕಗಳನ್ನು ಪರಿಹರಿಸಬಹುದು ಎಂದು ಹೇಳಿದ್ದಾರೆ.
ಇಸ್ರೇಲ್ ಸ್ಪೈವೇರ್ ಪೆಗಾಸಸ್ ಬಳಸಿಕೊಂಡು ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಮತ್ತು ರಾಜಕಾರಣಿಗಳ ಮೇಲೆ ಕಣ್ಗಾವಲು ಆರೋಪಗಳ ಬಗ್ಗೆ ಸ್ವತಂತ್ರ ತನಿಖೆಯನ್ನು ಕೋರಿ 2021ರಲ್ಲಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ.