ಸಿಎಎ ನಿಯಮಗಳ ಅನುಷ್ಠಾನ ತಡೆ ಕೋರಿ ಅರ್ಜಿ ಮಾ. 19ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (CAA) ನಿಯಮಗಳ ಅನುಷ್ಠಾನಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ನೀಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆ-2019ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿ ಇದೆ. ಆದುದರಿಂದ ಸಿಎಎ ನಿಯಮಗಳ ಅನುಷ್ಠಾನಕ್ಕೆ ತಡೆ ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಅದು ಕೋರಿದೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಪರವಾಗಿ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಪ್ರತಿಪಾದನೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲ್, ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಗಮನಕ್ಕೆ ತೆಗೆದುಕೊಂಡಿತು.
ವಲಸಿಗ ಹಿಂದೂಗಳಿಗೆ ಒಂದು ಬಾರಿ ದೇಶದ ಪೌರತ್ವವನ್ನು ನೀಡಿದ ನಂತರ, ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಆದುದರಿಂದ ಈ ಸಮಸ್ಯೆ ಕುರಿತು ತುರ್ತು ವಿಚಾರಣೆ ಅಗತ್ಯವಿದೆ ಎಂದು ಅರ್ಜಿಯಲ್ಲಿ ಅವರು ವಾದಿಸಿದ್ದಾರೆ.
‘‘ನಾವು ಈ ಅರ್ಜಿಗಳ ವಿಚಾರಣೆಯನ್ನು ಮಾರ್ಚ್ 19ರಂದು ನಡೆಸುತ್ತೇವೆ. 190ಕ್ಕೂ ಅಧಿಕ ಪ್ರಕರಣಗಳಿವೆ. ಎಲ್ಲ ಪ್ರಕರಣಗಳನ್ನೂ ಆಲಿಸಲಾಗುವುದು. ನಾವು ಮಧ್ಯಂತರ ಅರ್ಜಿಗಳೊಂದಿಗೆ ಪೂರ್ಣ ಸಂಗ್ರಹವನ್ನು ಮುಂದಿಡುತ್ತೇವೆ’’ ಮುಖ್ಯ ನ್ಯಾಯಮೂರ್ತಿ ತಿಳಿಸಿದರು.