ಪಶ್ಚಿಮ ಬಂಗಾಳ | ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧದ ಪ್ರತಿಭಟನೆ : ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

Photo credit: PTI
ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯಿದೆ-2025ರ ವಿರುದ್ಧದ ಪ್ರತಿಭಟನೆಯು ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಜಂಗಿಪುರದಲ್ಲಿ ಹಿಂಸಾತ್ಮಕ ಸ್ವರೂಪವನ್ನು ಪಡೆದುಕೊಂಡಿದೆ.
ಪ್ರತಿಭಟನಾಕಾರರು ರೈಲ್ವೆ ಹಳಿಗಳನ್ನು ತಡೆದು ರೈಲುಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ರೈಲ್ವೆ ಎರಡು ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.
ಪ್ರತಿಭಟನಾಕಾರರು ಪೊಲೀಸ್ ವಾಹನಗಳು ಮತ್ತು ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸುಟಿ ಮತ್ತು ಸಂಸರ್‌ಗಂಜ್‌ನಲ್ಲಿ ಹೆದ್ದಾರಿಯನ್ನು ತಡೆದು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ನ ಸ್ಥಳೀಯ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಇದರಿಂದಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಸಿಡಿಸಿ ಲಾಠಿ ಪ್ರಹಾರ ನಡೆಸಿದರು.
ʼಜಂಗಿಪುರದ ಸುತಿ ಮತ್ತು ಸಂಸರ್‌ಗಂಜ್ ಪ್ರದೇಶಗಳಲ್ಲಿ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಹಜ ಸ್ಥಿತಿಗೆ ಮರಳಿದೆ. ಸ್ಥಳದಲ್ಲಿ ಹೆಚ್ಚುವರಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆʼ ಎಂದು ಪಶ್ಚಿಮ ಬಂಗಾಳ ಪೊಲೀಸರು ಮಾಹಿತಿ ನೀಡಿದ್ದಾರೆ.